ಬೆಂಗಳೂರು: ರಾಜ್ಯದ ಕರಾವಳಿ ಹಾಗೂ ಮಲೆನಾಡು ಪ್ರದೇಶಗಳು ಮಳೆಯಿಂದಾಗಿ ಸಂಪೂರ್ಣವಾಗಿ ತೊಯ್ದು ಗಡಗಡ ನಡಗುವಂತಾಗಿದೆ. ಹೀಗಾಗಿ ಅಲ್ಲಿನ ಜನ -ಜೀವನ ಸಂಪೂರ್ಣವಾಗಿ ಅಸ್ತವ್ಯಸ್ಥಗೊಂಡಿದೆ. ಆದರೆ, ಮಳೆರಾಯ ಇಂದು ಕೂಡ ಸುರಿಯಲಿದ್ದಾನೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರಾವಳಿಯುದ್ದಕ್ಕೂ ದಟ್ಟ ಮೋಡ ಆವರಿಸಿದೆ. ಹೀಗಾಗಿ ಈ ಪ್ರದೇಶಗಳಲ್ಲಿನ ಜಿಲ್ಲೆಗಳಲ್ಲಿ ಜುಲೈ 23 ರಿಂದ 26 ರ ವರೆಗೆ ವ್ಯಾಪಕ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಅಲ್ಲದೇ, ಇಂದು ಉತ್ತರ ಹಾಗೂ ದಕ್ಷಿಣ ಒಳನಾಡಿನಲ್ಲಿ ಹಲವೆಡೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಇಂದು ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಇಂದು ಬೆಳಗ್ಗೆಯಿಂದ ಭಾರೀ ಮಳೆಯಾಗುತ್ತಿದ್ದು ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಜುಲೈ 24 ರಿಂದ 26 ರವರೆಗೂ ಮಳೆಯ ಮುನ್ಸೂಚನೆ ಇರುವ ಹಿನ್ನೆಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಕಳೆದ ಎರಡು ವಾರದಿಂದಲೂ ಸೈಕ್ಲೋನ್ ಹಾಗೂ ಮುಂಗಾರು ತೀವ್ರತೆಯಿಂದ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಿದೆ.
ಶಿವಮೊಗ್ಗ, ಕೊಡಗು, ಚಿಕ್ಕಮಗಳೂರಿಗೆ ನಾಳೆ ಭಾರೀ ಮಳೆ ಮುನ್ಸೂಚನೆ ಇದ್ದು ಜುಲೈ 23 ರಿಂದ ಜುಲೈ 24 ರವರೆಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಜುಲೈ 26 ರವರೆಗೂ ಕೆಲವು ಕಡೆ ಹಗುರವಾಗಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಆದರೆ, ಮಳೆಯ ಆರ್ಭಟ ಜುಲೈ 24ರಿಂದ ತುಸು ಕಡಿಮೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ತಿಳಿಸಿದೆ.