ಬಿಹಾರ : ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದಲ್ಲಿ ಬಿಹಾರದಲ್ಲಿ ನಡೆಸುತ್ತಿರುವ ಓಟರ್ ಅಧಿಕಾರ್ ಯಾತ್ರೆಯಲ್ಲಿ ಸಂಸದೆ ಪ್ರಿಯಾಂಕಾ ಗಾಂಧಿ ಭಾಗಿಯಾಗಿದ್ದಾರೆ.
ಒಂದು ದಿನದ ವಿರಾಮದ ಬಳಿಕ ಇಂದು(ಮಂಗಳವಾರ) ಪುನರಾರಂಭಗೊಂಡಿರುವ ಯಾತ್ರೆಯಲ್ಲಿ ಪ್ರಿಯಾಂಕಾ ಗಾಂಧಿ ಸಹಿತ ತೆಲಂಗಾಣ ಸಿಎಂ ರೇವಂತ್ ರೆಡ್ಡಿ, ಆರ್‌ಜೆಡಿ ನಾಯಕ ತೇಜಸ್ವಿ ಯಾದವ್ ಹಾಗೂ ಹಲವು ನಾಯಕರು ಪಾಲ್ಗೊಂಡಿದ್ದಾರೆ.
ಮುಂಬರುವ ವಿಧಾನಸಭಾ ಚುನಾವಣೆಗೆ ಬಿಹಾರದ ಇಂಡಿಯಾ ಮೈತ್ರಿಕೂಟದ ಪಕ್ಷಗಳು ಒಗ್ಗಟ್ಟಿನಿಂದ ಕೆಲಸ ಮಾಡುತ್ತಿವೆ. ಇಂಡಿಯಾ ಬಣ ಶೀಘ್ರದಲ್ಲೇ ಪ್ರಣಾಳಿಕೆಯನ್ನು ಬಿಡುಗಡೆ ಮಾಡಲಿದೆ ಎಂದು ಸುದ್ದಿಗೋಷ್ಟಿಯಲ್ಲಿ ರಾಹುಲ್ ಗಾಂಧಿ ಹೇಳಿದ್ದರು.
ಕೇಂದ್ರದಲ್ಲಿರುವ ಎನ್‌ಡಿಎ ನೇತೃತ್ವದ ಸರ್ಕಾರವನ್ನು ಕಟುವಾಗಿ ಟೀಕಿಸಿದ್ದ ಅವರು, ಬಿಹಾರದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಗಳ ವಿಶೇಷ ಪರಿಷ್ಕರಣೆಯು ಬಿಜೆಪಿಗೆ ಸಹಾಯ ಮಾಡಲು ಮತಗಳನ್ನು ಕದಿಯಲು ಚುನಾವಣಾ ಆಯೋಗದ ಸಾಂಸ್ಥಿಕ ಪ್ರಯತ್ನವಾಗಿದೆ ಎಂದು ಆರೋಪಿಸಿದ್ದರು.
ಬಿಹಾರದಲ್ಲಿ ಚುನಾವಣಾ ಆಯೋಗದ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ವಿರುದ್ಧ ರಾಹುಲ್ ಗಾಂಧಿ ‘ಮತದಾರ ಅಧಿಕಾರ ಯಾತ್ರೆ’ಯನ್ನು ಪ್ರಾರಂಭಿಸಿದ್ದು, ಸೆಪ್ಟೆಂಬರ್ 1ರಂದು ಪಟ್ನಾದಲ್ಲಿ ಯಾತ್ರೆ ಅಂತ್ಯಗೊಳ್ಳಲಿದೆ.


















