ಟಿ20 ವಿಶ್ವಕಪ್ ನಲ್ಲಿ ಆಸ್ಟ್ರೇಲಿಯಾದ ಪ್ಯಾಟ್ ಕಮಿನ್ಸ್ (Pat Cummins) ನೂತನ ದಾಖಲೆಗೆ ಸಾಕ್ಷಿಯಾಗಿದ್ದಾರೆ.
ಎರಡು ಬಾರಿ ಹ್ಯಾಟ್ರಿಕ್ ವಿಕೆಟ್ ಪಡೆಯುವ ಮೂಲಕ ಈ ದಾಖಲೆ ಬರೆದಿರುವುದು ವಿಶೇಷವಾಗಿದೆ. ಟಿ20 ವಿಶ್ವಕಪ್ ಇತಿಹಾಸದಲ್ಲೇ 2 ಬಾರಿ ಹ್ಯಾಟ್ರಿಕ್ ವಿಕೆಟ್ ಕಬಳಿಸಿದ ಏಕೈಕ ಬೌಲರ್ ಎಂಬ ದಾಖಲೆಯನ್ನು ಈಗ ಪ್ಯಾಟ್ ಕಮಿನ್ಸ್ ತಮ್ಮ ಹೆಸರಿಗೆ ಬರೆದುಕೊಂಡಿದ್ದಾರೆ.
ಬಾಂಗ್ಲಾದೇಶ ವಿರುದ್ಧದ ಪಂದ್ಯದಲ್ಲಿ 4 ಓವರ್ ಬೌಲ್ ಮಾಡಿದ್ದ ಪ್ಯಾಟ್ ಕಮಿನ್ಸ್ 29 ರನ್ ನೀಡಿ ಹ್ಯಾಟ್ರಿಕ್ ವಿಕೆಟ್ ಪಡೆದಿದ್ದರು. ಈಗ ಅಫ್ಘಾನಿಸ್ತಾನ್ ವಿರುದ್ಧ ಕೂಡ ಹ್ಯಾಟ್ರಿಕ್ ವಿಕೆಟ್ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.
ಅಫ್ಘಾನಿಸ್ತಾನ್ ವಿರುದ್ಧದ ಪಂದ್ಯದಲ್ಲಿ ಕಮಿನ್ಸ್ 18ನೇ ಓವರ್ ನ ಕೊನೆಯ ಎಸೆತದಲ್ಲಿ ರಶೀದ್ ಖಾನ್ ವಿಕೆಟ್ ಕಬಳಿಸಿದ್ದರು. ನಂತರ 20ನೇ ಓವರ್ ನ ಮೊದಲೆರಡು ಎಸೆತಗಳಲ್ಲಿ ಕರೀಮ್ ಜನ್ನತ್, ಗುಲ್ಬದ್ದೀನ್ ನೈಬ್ ವಿಕೆಟ್ ಕಬಳಿಸುವ ಮೂಲಕ ಹ್ಯಾಟ್ರಿಕ್ ಸಾಧನೆ ಮಾಡಿದರು.
ಈ ಮೂಲಕ ಟಿ20 ವಿಶ್ವಕಪ್ ನಲ್ಲಿ 2 ಬಾರಿ ಹ್ಯಾಟ್ರಿಕ್ ವಿಕೆಟ್ ಪಡೆದ ಮೊದಲ ಬೌಲರ್ ಎಂಬ ದಾಖಲೆ ಬರೆದಿದ್ದಾರೆ. ಲ್ಲದೇ, ಟಿ20 ವಿಶ್ವಕಪ್ ನಲ್ಲಿ ಹ್ಯಾಟ್ರಿಕ್ ವಿಕೆಟ್ ಕಬಳಿಸಿದ 7ನೇ ಬೌಲರ್ ಎನಿಸಿಕೊಂಡಿದ್ದಾರೆ.
ಈ ಪಂದ್ಯದಲ್ಲಿ ಟಾಸ್ ಗೆದ್ದ ಆಸ್ಟ್ರೇಲಿಯಾ ತಂಡದ ನಾಯಕ ಮಿಚೆಲ್ ಮಾರ್ಷ್ ಬೌಲಿಂಗ್ ಆಯ್ದುಕೊಂಡಿದ್ದರು. ಮೊದಲು ಬ್ಯಾಟ್ ಮಾಡಿದ ಅಫ್ಘಾನಿಸ್ತಾನ್ ತಂಡ 20 ಓವರ್ ಗಳಲ್ಲಿ 6 ವಿಕೆಟ್ ಕಳೆದುಕೊಂಡು 148 ರನ್ ಗಳಿಸಿತು. ಈ ಗುರಿ ಬೆನ್ನಟ್ಟಿದ ಆಸ್ಟ್ರೇಲಿಯಾ ತಂಡ ಸೋಲು ಕಂಡಿದೆ.