ಬೆಂಗಳೂರು: 2023ರ ವಿಧಾನಸಭೆ ಚುನಾವಣೆಯಲ್ಲಿ ಅಭೂತಪೂರ್ವ ಗೆಲುವು ಸಾಧಿಸಿದ ಬಳಿಕ ಕರ್ನಾಟಕದಲ್ಲಿ ಅಬ್ಬರದಿಂದ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದ ಕಾಂಗ್ರೆಸ್ ಸರ್ಕಾರವೀಗ ಮೆತ್ತಗಾದಂತೆ ಕಾಣುತ್ತಿದೆ. ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸುವುದು ಕಷ್ಟವಾಗುತ್ತಿದೆ. ಸ್ವಪಕ್ಷದಲ್ಲೇ ಗ್ಯಾರಂಟಿ ಯೋಜನೆಗಳ ಕುರಿತು ಅಪಸ್ವರ ಕೇಳಿಬರುತ್ತಿವೆ. ಇದರ ಬೆನ್ನಲ್ಲೇ, ಜನ ಸ್ವ-ಇಚ್ಛೆಯಿಂದ ಗ್ಯಾರಂಟಿ ಯೋಜನೆಗಳನ್ನು ಬಿಟ್ಟುಕೊಡಬೇಕು ಎಂದು ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಅಧ್ಯಕ್ಷ ಎಚ್ ಎಂ ರೇವಣ್ಣ ಹೇಳಿದ್ದಾರೆ.
ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. “ರಾಜ್ಯದ ಕೆಲವೆಡೆ ಮಹಿಳೆಯರು ನಮಗೆ ಗ್ಯಾರಂಟಿ ಯೋಜನೆಗಳು ಎಂದು ಹೇಳುತ್ತಿದ್ದಾರೆ. ಬಡವರಿಗೆ ಯೋಜನೆಗಳು ತಲುಪಬೇಕು ಎಂಬುದು ಅವರ ಆಶಯವಾಗಿದೆ. ಹಾಗಾಗಿ, ಸ್ವ-ಇಚ್ಛೆಯಿಂದ ಗ್ಯಾರಂಟಿ ಯೋಜನೆಗಳನ್ನು ಕೈಬಿಡುವ ಯೋಜನೆಯ ಜಾರಿಗೆ ಚಿಂತನೆ ನಡೆಸುತ್ತಿದ್ದೇವೆ” ಎಂದು ಎಚ್.ಎಂ.ರೇವಣ್ಣ ಹೇಳಿರುವುದು ಭಾರಿ ಚರ್ಚೆಗೆ ಗ್ರಾಸವಾಗಿದೆ.
ಗ್ಯಾರಂಟಿ ಅನುಷ್ಠಾನದ ಬಗ್ಗೆ ಕಾಂಗ್ರೆಸ್ ನಾಯಕರಾದ ಕೆಸಿ ವೇಣುಗೋಪಾಲ್, ಉಸ್ತುವಾರಿ ರಣದೀಪ್ ಸುರ್ಜೇವಾಲಗೆ ಮಾಹಿತಿ ನೀಡಿದ್ದೇನೆ. ಗ್ಯಾರಂಟಿ ಯೋಜನೆಗಳ ವಿರುದ್ಧ ಮಾತನಾಡುವ ಬಿಜೆಪಿ ನಾಯಕರು, ಬಡವರಿಗೆ ಬಾಯಿ ಇಲ್ಲ ಅದಕ್ಕೆ ಮಾತನಾಡಲ್ಲ ಎಂದು ಹೇಳುತ್ತಾರೆ. ಆದರೆ ನಾವು ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವುದಿಲ್ಲ ಎಂದರು. ಕಾಂಗ್ರೆಸ್ ಅಧಿಕಾರ ವಹಿಸಿಕೊಂಡ ನಂತರ ನಡೆದ ಮೊದಲ ಸಚಿವ ಸಂಪುಟ ಸಭೆಯಲ್ಲಿ ಖಾತರಿಗಳನ್ನು ಜಾರಿಗೆ ತರಲಾಗಿತ್ತು ಎಂದು ರೇವಣ್ಣ ಹೇಳಿದರು.
ಎಲ್ಲಾ ಯೋಜನೆಗಳನ್ನು ಕಾರ್ಯಗತಗೊಳಿಸಲಾಗಿದೆ. ಗೃಹಲಕ್ಷ್ಮಿ ಯೋಜನೆಯಡಿಯಲ್ಲಿ, ಮೂರು ತಿಂಗಳ ಕಂತುಗಳು ಬಾಕಿ ಉಳಿದಿವೆ. ಈಗ ಅದನ್ನು ತಲುಪಿಸುವ ವ್ಯವಸ್ಥೆ ಮಾಡಲಾಗಿದೆ. ಗೃಹಲಕ್ಷ್ಮಿ ಯೋಜನೆಯಡಿಯಲ್ಲಿ ಸರ್ಕಾರವು ಕುಟುಂಬದ ಎಲ್ಲಾ ಮಹಿಳಾ ಮುಖ್ಯಸ್ಥರಿಗೆ ಪ್ರತಿ ತಿಂಗಳು 2,000 ರೂ. ನಗದು ಪ್ರೋತ್ಸಾಹವನ್ನು ನೀಡುತ್ತಿದೆ. ನಾವು ಖಾತರಿಗಳನ್ನು ನಿಲ್ಲಿಸುವುದಿಲ್ಲ. ಈ ಖಾತರಿಗಳು ಬಡವರ ಆರ್ಥಿಕ ಸ್ಥಿತಿಯನ್ನು ಸುಧಾರಿಸಿದೆ ಎಂಬುದಾಗಿ ಆರ್ಥಿಕ ತಜ್ಞರು ಅಭಿಪ್ರಾಯಪಟ್ಟಿದ್ದಾರೆ ಎಂದು ತಿಳಿಸಿದರು.