ಬೆಂಗಳೂರು: ರಾಜ್ಯ ರಾಜಧಾನಿಯಲ್ಲಿ ಮುಂದಿನ 24 ಗಂಟೆಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆಯಿದ್ದು, ಅಧಿಕಾರಿಗಳು ಸರ್ವ ಸನ್ನದ್ದರಾಗಿ ಕೆಲಸ ಮಾಡಬೇಕು. ಯಾವುದೇ ಜೀವ, ಆಸ್ತಿ ಹಾನಿಯಾಗದಂತೆ ನೋಡಿಕೊಳ್ಳಬೇಕು” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಮಳೆ ಹಾನಿ ತಡೆಯಲು ಮುನ್ನೆಚ್ಚರಿಕೆ ಕ್ರಮವಾಗಿ ಅಧಿಕಾರಿಗಳ ಸಭೆ ನಡೆಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 1533 ಗೆ ಸಾರ್ವಜನಿಕರು ಕರೆ ಮಾಡಿ ಮಳೆ ಹಾನಿ ಸಂಬಂಧಿಸಿದಂತೆ ತಕ್ಷಣ ದೂರು ನೀಡಬಹುದು. ಅಪಾಯಕಾರಿ ಮರ ತೆರವಿಗೆ ಅರಣ್ಯ ಇಲಾಖೆ ಮತ್ತು ಬಿಬಿಎಂಪಿ ಜಂಟಿಯಾಗಿ ಸಮೀಕ್ಷೆ ನಡೆಸಿ ಕಾರ್ಯ ನಿರ್ವಹಿಸಬೇಕು. ತಗ್ಗು ವಸತಿ ಪ್ರದೇಶಗಳಿಗೆ ನೀರು ನುಗ್ಗದಂತೆ ಉತ್ತಮ ಸಾಮರ್ಥ್ಯದ ಪಂಪ್ ಸೆಟ್, ಜನರೇಟರ್ ಗಳು ಹಾಗೂ ಹೆಚ್ಚು ನೀರು ಹರಿಯುವ ರಾಜಕಾಲುವೆ ಹತ್ತಿರ ಜೆಸಿಬಿ, ಟಿಪ್ಪರ್ ಗಳನ್ನು ಮುನ್ನೆಚರಿಕೆ ಕ್ರಮವಾಗಿ ಸಿದ್ದ ಮಾಡಿಕೊಂಡಿರಬೇಕು.
ಎನ್ ಡಿಆರ್ ಎಫ್ ತಂಡದೊಟ್ಟಿಗೂ ಸಂಪರ್ಕದಲ್ಲಿ ಇರಬೇಕು ಎಂದು ಸೂಚನೆ ನೀಡಿದ್ದಾರೆ. ಬೆಸ್ಕಾಂ, ಕೆಪಿಟಿಸಿಎಲ್, ಬಿಬಿಎಂಪಿ, ಬಿಡ್ಬ್ಯೂಎಸ್ ಎಸ್ ಬಿ, ಅರಣ್ಯ ಇಲಾಖೆ ಸೇರಿದಂತೆ ಬೆಂಗಳೂರಿಗೆ ಸಂಬಂಧಿಸಿದ ಯಾವ ಇಲಾಖೆಯೂ ಜವಾಬ್ದಾರಿಯಿಂದ ನುಣುಚಿಕೊಳ್ಳುವಂತಿಲ್ಲ ಎಂದು ಸೂಚನೆ ನೀಡಿದ್ದೇನೆ. ರಾಜಕಾಲುವೆಗೆ ಸಂಬಂಧಿಸಿದಂತೆ ಒಂದಷ್ಟು ಜನ ನ್ಯಾಯಲಯದಿಂದ ತಡೆಯಾಜ್ಞೆ ತಂದಿರುತ್ತಾರೆ. ಇದನ್ನು ಮುಂದಿಟ್ಟು ಕೊಂಡು ಮೈಗೆ ಎಣ್ಣೆ ಹಚ್ಚಿಕೊಂಡು ಅಧಿಕಾರಿಗಳು ಕೆಲಸದಿಂದ ನುಣುಚಿಕೊಳ್ಳುವಂತಿಲ್ಲ ಎಂದು ಹೇಳಿದ್ದಾರೆ.