ಬೆಂಗಳೂರು: ಮುಡಾ ಹಗರಣದ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಅವರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಹಾಗೂ ಜೆಡಿಎಸ್ ಹಮ್ಮಿಕೊಂಡಿರುವ ಮೈಸೂರು ಚಲೋ ಪಾದಯಾತ್ರೆಗೆ ಸರ್ಕಾರ ಅನುಮತಿ ನೀಡಿದೆ ಎಂದು ಗೃಹ ಸಚಿವ ಜಿ ಪರಮೇಶ್ವರ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಹಾಗೂ ಜೆಡಿಎಸ್ ನಾಯಕರು ಪಾದಯಾತ್ರೆಯನ್ನು ಶಾಂತಿರೀತಿಯಾಗಿ ಮಾಡುತ್ತೇವೆಂದು ಹೇಳಿದ್ದರಿಂದಾಗಿ ಪಾದಯಾತ್ರೆಗೆ ಅನುಮತಿ ನೀಡಲು ನಿರ್ಧರಿಸಿದ್ದೇವೆ ಎಂದು ಹೇಳಿದ್ದಾರೆ.
ಇತ್ತೀಚೆಗಷ್ಟೇ ಗೃಹ ಸಚಿವ ಜಿ. ಪರಮೇಶ್ವರ್, ಯಾವುದೇ ಕಾರಣಕ್ಕೂ ನಾವು ಪಾದಯಾತ್ರೆಗೆ ಅನುಮತಿ ನೀಡುವುದಿಲ್ಲ. ಅವರು ಮಾಡುವುದಿದ್ದರೆ ಮಾಡಿಕೊಳ್ಳಲಿ, ಅದರ ಬಗ್ಗೆ ನಮ್ಮ ತಕರಾರಿಲ್ಲ. ಆದರೆ, ಅಧಿಕೃತವಾಗಿ ಪೊಲೀಸ್ ಇಲಾಖೆಯಿಂದ ಅನುಮತಿ ನೀಡಲಾಗುವುದು ಎಂದು ಹೇಳಿದ್ದರು. ಆದರೆ, ಈಗ ಅನುಮತಿ ನೀಡುವುದಾಗಿ ಹೇಳಿದ್ದಾರೆ.
ಇನ್ನೊಂದೆಡೆ ಬೆಂಗಳೂರು ನಗರ ಪೊಲಿಸ್ ಆಯುಕ್ತ ಬಿ. ದಯಾನಂದ್ ಕೂಡ ಪಾದಯಾತ್ರೆಗೆ ಅನುಮತಿ ನೀಡುವುದಿಲ್ಲ ಎಂದು ಶುಕ್ರವಾರ ಬೆಳಿಗ್ಗೆ ಹೇಳಿದ್ದರು. ಇದರ ಬೆನ್ನಲ್ಲಿಯೇ ಈಗ ಸಚಿವರು ಪಾದಯಾತ್ರೆಗೆ ಅನುಮತಿ ನೀಡಲಾಗಿದೆ ಎಂದು ಹೇಳಿದ್ದಾರೆ.
ಮೂಡಾ ಅಕ್ರಮ ಆರೋಪಕ್ಕೆ ಸಂಬಂಧಿಸಿದಂತೆ ಆತುರಾತುರವಾಗಿ ರಾಜ್ಯಪಾಲರು ಶೋಕಾಸ್ ನೋಟಿಸ್ ಕೊಟ್ಟಿದ್ದಾರೆ. ಗುರುವಾರ ರಾತ್ರಿಯೇ ಸಂಪುಟದ ನಿರ್ಣಯ ಕಳಿಸಲು ತೀರ್ಮಾನಿಸಿದ್ದೆವು. ರಾಜ್ಯದಲ್ಲಿ ರಾಜ್ಯಪಾಲರಿಲ್ಲ, ಕಚೇರಿಗೆ ನಿನ್ನೆಯೇ ತಲುಪಿಸಿರಬೇಕು. ರಾಜ್ಯಪಾಲರ ಮೇಲೆ ಒತ್ತಡಗಳು ಬಂದಿವೆ ಅನ್ನುವ ಅನುಮಾನ ಇದೆ ಎಂದು ಪರಮೇಶ್ವರ್ ಆರೋಪಿಸಿದ್ದಾರೆ.