ಬೆಂಗಳೂರು: ಸಿಎಂ ಸಿದ್ದರಾಮಯ್ಯ (Siddaramaiah) ವಿರುದ್ದ ತನಿಖೆ ನಡೆಸಲು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡುತ್ತಿದ್ದಂತೆ ಕಾಂಗ್ರೆಸ್ ವಲಯದಲ್ಲಿ ಭಾರೀ ಆಕ್ರೋಶ ವ್ಯಕ್ತವಾಗಿದೆ. ಇದರ ಬೆನ್ನಲ್ಲಿಯೇ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಚರ್ಚೆ ನಡೆಸಿದ್ದಾರೆ.
ರಾಜ್ಯಪಾಲರ ನಿರ್ಧಾರಕ್ಕೆ ಸಂಪುಟ ಸದಸ್ಯರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಮಧ್ಯೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge), ಬೆಂಗಳೂರಿಗೆ ಆಗಮಿಸಿದ್ದು ತೀವ್ರ ಕುತೂಹಲ ಕೆರಳಿಸಿದೆ. ಅಲ್ಲದೇ, ಅವರು ಈ ಸಂದರ್ಭದಲ್ಲಿ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಚರ್ಚೆ ಮಾಡಿದ್ದಾರೆ.
ರಾಜ್ಯಪಾಲರ ನಡೆ ಕುರಿತು ಕಾನೂನು ಹೋರಾಟ ಮಾಡಿ. ನಿಮಗೆ ಹೈಕಮಾಂಡ್ ಸಂಪೂರ್ಣ ಸಹಕಾರ ನೀಡಲಿದೆ. ಬಿಜೆಪಿ ಹಾಗೂ ಜೆಡಿಎಸ್ ಹಗರಣಗಳನ್ನು ಚುರುಕುಗೊಳಿಸಿ. ಬಿಜೆಪಿ ಸರ್ಕಾರದ ಹಗರಣದ ತನಿಖಾ ವರದಿ ಸಿದ್ಧವಿದ್ದರೆ ಬಿಡುಗಡೆಗೊಳಿಸಿ ಎಂದು ಸಲಹೆ ನೀಡಿದ್ದಾರೆ ಎನ್ನಲಾಗಿದೆ.
ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ, ಬಿಜೆಪಿಯವರು ರಾಜ್ಯಪಾಲರ ಮೂಲಕ ತೊಂದರೆ ಕೊಡುತ್ತಿದ್ದಾರೆ. ಕಳೆದ ಹಲವು ವರ್ಷಗಳಿಂದ ಬಿಜೆಪಿ ಇದನ್ನೇ ಮಾಡುತ್ತಿದೆ. ರಾಜ್ಯಪಾಲರು ಪ್ರತಿಯೊಂದನ್ನು ಪರಿಶೀಲಿಸಿ, ಕಾನೂನು ತಜ್ಞರೊಂದಿಗೆ ಚರ್ಚಿಸಿ ನಿರ್ಣಯ ಕೈಗೊಳ್ಳಬೇಕಿತ್ತು ಎಂದು ಬೇಸರ ವ್ಯಕ್ತಪಡಿಸಿದ್ದಾರೆ.
ಸಿಎಂ ವಿರುದ್ಧ ಪ್ರಾಸಿಕ್ಯೂಷನ್ ಗೆ ರಾಜ್ಯಪಾಲರ ಅನುಮತಿ ವಿಚಾರವಾಗಿ ನಾಳೆ ಬೆಂಗಳೂರಿಗೆ ಸುಪ್ರೀಂಕೋರ್ಟ್‌ನ ಹಿರಿಯ ವಕೀಲರಾದ ಅಭಿಷೇಕ್ ಮನು ಸಿಂಘ್ವಿ ಮತ್ತು ಕಪಿಲ್ ಸಿಬಲ್ ಆಗಮಿಸುವ ಸಾಧ್ಯತೆ ಇದೆ.


















