ಬೆಂಗಳೂರು : ಬ್ಯಾಂಕಿಂಗ್ ಕ್ಷೇತ್ರದಲ್ಲಿ ಕೆಲಸ ಮಾಡಬೇಕು ಎಂದು ಬಯಸುತ್ತಿರುವವರಿಗೆ ಸುವರ್ಣಾವಕಾಶ ದೊರೆತಿದೆ. ದೇಶದ ಪ್ರಮುಖ ಸಾರ್ವಜನಿಕ ವಲಯದ ಬ್ಯಾಂಕ್ ಗಳಲ್ಲಿ ಒಂದಾಗಿರುವ ಪಂಜಾಬ್ ನ್ಯಾಷನಲ್ ಬ್ಯಾಂಕ್ ನಲ್ಲಿ (PNB LBO Recruitment 2026) ಖಾಲಿ ಇರುವ 545 ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿದೆ. ಲೋಕಲ್ ಬ್ಯಾಂಕ್ ಆಫೀಸರ್ ಹುದ್ದೆಗಳ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು, ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಈಗ ಅರ್ಜಿ ಸಲ್ಲಿಕೆಯ ದಿನಾಂಕವನ್ನು ಆಗಸ್ಟ್ 16ರವರೆಗೆ ವಿಸ್ತರಣೆ ಮಾಡಲಾಗಿದೆ.
ಹುದ್ದೆಗಳ ಸಂಕ್ಷಿಪ್ತ ವಿವರ
ನೇಮಕಾತಿ ಸಂಸ್ಥೆ: ಪಂಜಾಬ್ ನ್ಯಾಷನಲ್ ಬ್ಯಾಂಕ್
ಒಟ್ಟು ಹುದ್ದೆಗಳು: 545
ಹುದ್ದೆಯ ಹೆಸರು: ಲೋಕಲ್ ಬ್ಯಾಂಕ್ ಆಫೀಸರ್
ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: ಆಗಸ್ಟ್ 16
ಅರ್ಜಿ ಸಲ್ಲಿಸುವವರು ಆಯಾ ರಾಜ್ಯದ ಸ್ಥಳೀಯ ಭಾಷೆಯಲ್ಲಿ ಓದಲು, ಬರೆಯಲು ಹಾಗೂ ಮಾತನಾಡಲು ಬರುವುದು ಕಡ್ಡಾಯವಾಗಿದೆ. ಹಾಗೆಯೇ, ಬ್ಯಾಂಕಿಂಗ್ ಕ್ಷೇತ್ರದಲ್ಲಿ ಒಂದು ವರ್ಷ ಕೆಲಸ ಮಾಡಿರಬೇಕು ಎಂದು ಕೂಡ ತಿಳಿಸಲಾಗಿದೆ. ಗುಜರಾತ್, ಆಂಧ್ರಪ್ರದೇಶ, ಮಹಾರಾಷ್ಟ್ರ, ತೆಲಂಗಾಣ, ತಮಿಳುನಾಡು, ಜಮ್ಮು-ಕಾಶ್ಮೀರ ಸೇರಿ ದೇಶದ ಹಲವೆಡೆ ಇರುವ ಬ್ಯಾಂಕಿನ ಬ್ರ್ಯಾಂಚ್ ಗಳಿಗೆ ನೇಮಕಾತಿ ನಡೆಯುತ್ತಿದೆ. ಕರ್ನಾಟಕದಲ್ಲೂ 78 ಹುದ್ದೆಗಳು ಖಾಲಿ ಇವೆ.
ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಲ್ಲಿ ಪದವಿ ಪಡೆದವರು ಅರ್ಜಿಗಳನ್ನು ಸಲ್ಲಿಸಲು ಅರ್ಹರಾಗಿದ್ದಾರೆ. ಅರ್ಜಿ ಸಲ್ಲಿಸಲು ಕನಿಷ್ಠ 20ರಿಂದ 30 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ. ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ 59 ರೂಪಾಯಿ ಅರ್ಜಿ ಶುಲ್ಕವಿದೆ. ಉಳಿದ ಅಭ್ಯರ್ಥಿಗಳಿಗೆ 1,180 ರೂಪಾಯಿ ನಿಗದಿಪಡಿಸಲಾಗಿದೆ. ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ 5 ವರ್ಷಗಳ ವಯೋಮಿತಿ ಸಡಿಲಿಕೆ ಇದ್ದರೆ, ಒಬಿಸಿ ಸಮುದಾಯದವರಿಗೆ 3 ವರ್ಷಗಳ ವಯೋಮಿತಿ ಸಡಿಲಿಕೆ ನಿಯಮ ಅನ್ವಯವಾಗುತ್ತದೆ. ಅರ್ಜಿ ಸಲ್ಲಿಸಲು pnbindia.inಗೆ ಭೇಟಿ ನೀಡಬಹುದಾಗಿದೆ.
ಇದನ್ನೂ ಓದಿ : ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್. ಚಂದ್ರಶೇಖರನ್ ರಾಜೀನಾಮೆ ; ದಶಕದ ಆಡಳಿತ ಅಂತ್ಯ



















