ಬೆಂಗಳೂರು: ರಾಜಧಾನಿಯಲ್ಲಿ ಡ್ರಗ್ಸ್ ದಂಧೆಯ ವಿರುದ್ಧ ಬೆಂಗಳೂರು ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ, ಕೋಟ್ಯಾಂತರ ಮೌಲ್ಯದ ಮಾದಕ ವಸ್ತುಗಳನ್ನು ಜಪ್ತಿ ಮಾಡಲಾಗಿದೆ. 18.75 ಕೋಟಿ ರೂ. ಮೌಲ್ಯದ ಹೈಡ್ರೋ ಗಾಂಜಾ, ಸಾಮಾನ್ಯ ಗಾಂಜಾ ಮತ್ತು ಎಂಡಿಎಂಎ ಸೇರಿದಂತೆ ವಿವಿಧ ಮಾದಕವಸ್ತುಗಳನ್ನು ಜಪ್ತಿ ಮಾಡಿದ್ದಾರೆ. ಈ ಸಂಬಂಧ 10 ಮಂದಿ ಆರೋಪಿಗಳನ್ನು ಬಂಧಿಸಲಾಗಿದ್ದು, ಐದು ಪ್ರತ್ಯೇಕ ಪ್ರಕರಣ ದಾಖಲಿಸಿದ್ದಾರೆ.
ಮಹಾಲಕ್ಷ್ಮಿ ಲೇಔಟ್ ಠಾಣೆ ಪೊಲೀಸರು ಬಂಧಿಸಿರುವ ಆರೋಪಿಗಳಿಂದ ಬರೋಬ್ಬರಿ 18 ಕೆ.ಜಿ. 590 ಗ್ರಾಂ ಹೈಡ್ರೋಗಾಂಜಾವನ್ನು ಜಪ್ತಿ ಮಾಡಲಾಗಿದ್ದು, ಇದರ ಮೌಲ್ಯ 18.60 ಕೋಟಿ ರೂ. ಎಂದು ಅಂದಾಜಿಸಲಾಗಿದೆ. ಬ್ಯಾಂಕಾಕ್‌ನಿಂದ ವಿಮಾನದ ಮೂಲಕ ಬೆಂಗಳೂರಿಗೆ ಸಾಗಿಸಲಾಗಿದ್ದ ಈ ಹೈಡ್ರೋಗಾಂಜಾವನ್ನು ಏರ್‌ಪೋರ್ಟ್‌ನಿಂದ ಹೊರಬರುತ್ತಿದ್ದಾಗ ವಶಪಡಿಸಿಕೊಳ್ಳಲಾಗಿದೆ. ಈ ಪ್ರಕರಣದಲ್ಲಿ ಓರ್ವ ಮಹಿಳೆ ಮತ್ತು ಓರ್ವ ಪುರುಷ ಸೇರಿದಂತೆ ಕೊರಿಯರ್ ಮಾಡುತ್ತಿದ್ದ ಇಬ್ಬರನ್ನು ಬಂಧಿಸಲಾಗಿದೆ. ತನಿಖೆ ವೇಳೆ ಇವರು ಮಾದಕವಸ್ತು ವಾಹಕರು ಎಂದು ತಿಳಿದುಬಂದು ಬಂದಿದ್ದು, ಉಳಿದ ಆರೋಪಿಗಳ ಪತ್ತೆಗಾಗಿ ಪೊಲೀಸರು ಶೋಧ ಕಾರ್ಯ ಮುಂದುವರಿಸಿದ್ದಾರೆ.
ಇನ್ನು, ಆರ್‌ಎಂಸಿ ಯಾರ್ಡ್ ಪೊಲೀಸರು ಖಚಿತ ಮಾಹಿತಿ ಆಧರಿಸಿ ಕಾರ್ಯಾಚರಣೆ ನಡೆಸಿ, ಬ್ಯಾಗ್‌ನಲ್ಲಿ ಗಾಂಜಾ ತಂದು ಮಾರಾಟಕ್ಕೆ ಯತ್ನಿಸುತ್ತಿದ್ದ ಓರ್ವ ಆರೋಪಿಯನ್ನು ಬಂಧಿಸಿದ್ದಾರೆ. ಆತನಿಂದ 8 ಕೆ.ಜಿ. 350 ಗ್ರಾಂ ಗಾಂಜಾವನ್ನು ವಶಪಡಿಸಿಕೊಳ್ಳಲಾಗಿದ್ದು, ಇದರ ಮೌಲ್ಯ 8.35 ಲಕ್ಷ ರೂ. ಎಂದು ಅಂದಾಜಿಸಲಾಗಿದೆ.
ಆರ್‌ಟಿ ನಗರ ಪೊಲೀಸರು ಮೈದಾನವೊಂದರಲ್ಲಿ ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದ ಐವರು ಆರೋಪಿಗಳನ್ನು ಬಂಧಿಸಿದ್ದಾರೆ. ದಾಳಿ ನಡೆಸಿ ಬಂಧಿತರಿಂದ 5 ಕೆ.ಜಿ. 437 ಗ್ರಾಂ ಗಾಂಜಾ ಜಪ್ತಿ ಮಾಡಲಾಗಿದ್ದು, ಇದರ ಮೌಲ್ಯ 5.43 ಲಕ್ಷ ರೂ. ಎಂದು ಅಂದಾಜಿಸಲಾಗಿದೆ. ಈ ಆರೋಪಿಗಳು ತ್ರಿಪುರ ರಾಜ್ಯದಿಂದ ಗಾಂಜಾವನ್ನು ತಂದು ಬೆಂಗಳೂರಿನಲ್ಲಿ ಮಾರಾಟ ಮಾಡಲು ಯತ್ನಿಸುತ್ತಿದ್ದರು ಎಂದು ತಿಳಿದುಬಂದಿದೆ. ಬಂಧಿತ ಆರೋಪಿಗಳನ್ನು ಸದ್ಯ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಜೆ.ಸಿ ನಗರ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ಓರ್ವ ವಿದೇಶಿ ಪ್ರಜೆಯನ್ನು ಬಂಧಿಸಿ, ಆತನಿಂದ 21 ಗ್ರಾಂ ಎಂಡಿಎಂಎ ಮಾದಕವಸ್ತುವನ್ನು ವಶಪಡಿಸಿಕೊಂಡಿದ್ದಾರೆ. ಇದರ ಮೌಲ್ಯ 1.35 ಲಕ್ಷ ರೂ. ಎಂದು ಅಂದಾಜಿಸಲಾಗಿದೆ. ಆರೋಪಿಯಿಂದ ಒಂದು ಮೊಬೈಲ್ ಮತ್ತು 1,500 ರೂ. ನಗದನ್ನು ಕೂಡ ಜಪ್ತಿ ಮಾಡಲಾಗಿದೆ. ಅದೇ ರೀತಿ ಮಲ್ಲೇಶ್ವರಂ ಪೊಲೀಸರು ಓರ್ವ ವ್ಯಕ್ತಿಯನ್ನು ಬಂಧಿಸಿ, ಆತನಿಂದ 772 ಗ್ರಾಂ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ.
ಇದನ್ನೂ ಓದಿ: ಅಡಿಕೆ ಬೆಳೆಗಾರರ ಸಂಕಷ್ಟ ಪರಿಹರಿಸಿ | ಸಂಸತ್ತಿನಲ್ಲಿ ಧ್ವನಿ ಎತ್ತಿದ ಬಿ.ವೈ.ರಾಘವೇಂದ್ರ



















