ಬೆಂಗಳೂರು: ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಕೇಳಿ ಬಂದಿರುವ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂರನೇ ಚಾರ್ಜ್ ಶೀಟ್ ಸಲ್ಲಿಕೆಯಾಗಿದ್ದು, ಜಿಪಂ ಮಾಜಿ ಸದಸ್ಯೆಗೆ ಬೆದರಿಕೆಯೊಡ್ಡಿ ಪ್ರಜ್ವಲ್ ರೇವಣ್ಣ ಅತ್ಯಾಚಾರ ಎಸಗಿದ್ದು ದೃಢವಾಗಿದೆ ಎಂದು ಎಸ್ ಐಟಿ ನ್ಯಾಯಾಲಯಕ್ಕೆ ಹೇಳಿದೆ.
40 ವರ್ಷದ ಸಂತ್ರಸ್ತೆ ಮೇಲೆ ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅತ್ಯಾಚಾರ ಎಸಗಿದ್ದ ಪ್ರತ್ಯೇಕ ಪ್ರಕರಣದ ತನಿಖೆ ಪೂರ್ಣಗೊಳಿಸಿದ ಎಸ್ ಐಟಿ, ಸೆ. 13ರಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ 1,691 ಪುಟಗಳ ಚಾರ್ಜ್ ಶೀಟ್ ಸಲ್ಲಿಸಿದೆ.
ಆರೋಪಿ ಪ್ರಜ್ವಲ್, ಸಂತ್ರಸ್ತೆ ಮೇಲೆ ಅತ್ಯಾಚಾರ ನಡೆಸಿ, ಮೊಬೈಲ್‌ನಲ್ಲಿ ವಿಡಿಯೋ ಮಾಡಿದ್ದಾನೆ. ನಂತರ ಈ ವಿಷಯವನ್ನು ಯಾರಿಗಾದರೂ ಹೇಳಿದರೆ ವಿಡಿಯೋ ವೈರಲ್ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ. ಈ ಕುರಿತು ಸಂತ್ರಸ್ತೆ ಹೇಳಿಕೆ ದಾಖಲಿಸಿದ್ದಾರೆ ಎಂದು ತಿಳಿದು ಬಂದಿದೆ.
ಆರೋಪಿ ಪ್ರಜ್ವಲ್, ಸಂತ್ರಸ್ತೆ ಮೇಲೆ ಬಲವಂತವಾಗಿ ಅತ್ಯಾಚಾರ ನಡೆಸಿದ್ದಾನೆ ಎನ್ನುವುದು ತನಿಖೆಯಿಂದ ದೃಢಪಟ್ಟಿದೆ ಎಂಬುವುದನ್ನು ಚಾರ್ಜ್ ಶೀಟ್ ನಲ್ಲಿ ಉಲ್ಲೇಖಿಸಲಾಗಿದೆ. ಅಲ್ಲದೇ, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಕ್ಷ್ಯಾಧಾರಗಳನ್ನು ಲಗತ್ತಿಸಲಾಗಿದೆ. 120 ಸಾಕ್ಷಿದಾರರ ಹೇಳಿಕೆಗಳು, ಎಫ್‌ಎಸ್‌ಎಲ್ ವರದಿ ಹಾಗೂ ಡಿಜಿಟಲ್ ಸಾಕ್ಷ್ಯಾಧಾರಗಳನ್ನು ಲಗತ್ತಿಸಲಾಗಿದೆ.
ನಾಲ್ವರು ಮಹಿಳೆಯರ ಮೇಲೆ ಅತ್ಯಾಚಾರವೆಸಗಿದ ಆರೋಪ ಎದುರಿಸುತ್ತಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ನಾಲ್ಕು ಪ್ರತ್ಯೇಕ ಪ್ರಕರಣಗಳ ಕುರಿತು ತನಿಖೆ ನಡೆಸಲಾಗುತ್ತಿದೆ. ಈಗಾಗಲೇ ಮೂರು ಪ್ರಕರಣಗಳಿಗೆ ಸಂಬಂಧಿಸಿದಂತೆ ಚಾರ್ಜ್ ಶೀಟ್ ಸಲ್ಲಿಸಲಾಗಿದೆ. ಮತ್ತೊಂದು ಪ್ರಕರಣದ ತನಿಖೆ ಕೊನೆಯ ಹಂತದಲ್ಲಿದೆ. ಕಳೆದ ಏಪ್ರಿಲ್ ನಲ್ಲಿ ಪ್ರಜ್ವಲ್ ರೇವಣ್ಣ ಭಾಗಿಯಾಗಿದ್ದಾರೆ ಎನ್ನಲಾದ ಅಶ್ಲೀಲ ವಿಡಿಯೊಗಳು ವೈರಲ್ ಆಗಿದ್ದವು. ಈ ಕುರಿತು ಸಂತ್ರಸ್ತೆಯೊಬ್ಬರು ದೂರು ದಾಖಲಿಸಿದ್ದರು.