ಬೆಂಗಳೂರು : ಕೇಂದ್ರ ಸೇವೆಗೆ ಅರ್ಹತೆ ಪಡೆದ ಡಿಜಿಪಿಗಳ ಅಧಿಕಾರಿಗಳ ಪಟ್ಟಿಯಲ್ಲಿ ಪ್ರಣಬ್ ಮೊಹಂತಿ ಅರ್ಹತೆ ಪಡೆದಿರುವುದು ಕರ್ನಾಟಕಕ್ಕೆ ಹೆಮ್ಮೆ. ಕೇಂದ್ರ ಸರ್ಕಾರ ಕೇಂದ್ರ ಸೇವೆಗೆ ಅರ್ಹತೆ ಪಡೆಯುವ ಐಪಿಎಸ್ ಅಧಿಕಾರಿಗಳ ಪಟ್ಟಿಯನ್ನು ಬಿಡುಗಡೆ ಮಾಡುತ್ತದೆ. ಹಿರಿತನ, ತನಿಖಾ ಸಾಮರ್ಥ್ಯ, ಅನುಭವಗಳನ್ನು ಪರಿಗಣಿಸಿ ಕೇಂದ್ರ ಸರ್ಕಾರ ಈ ಪಟ್ಟಿಗೆ ಇಡೀ ದೇಶದ ಐಪಿಎಸ್ ಅಧಿಕಾರಿಗಳ ಹೆಸರನ್ನು ಸೇರಿಸಿ ಬಿಡುಗಡೆ ಮಾಡುತ್ತದೆ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಹೇಳಿದ್ದಾರೆ.
ವರದಿಗಾರರ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿರುವ ಸಿಎಂ ಪರಮೇಶ್ವರ್, ಕೇಂದ್ರ ಬಿಡುಗಡೆ ಮಾಡಿರುವ ಪಟ್ಟಿಯಲ್ಲಿ ಮೊಹಂತಿ ಹೆಸರು ಬಂದಿದೆ ಎಂಬ ಕಾರಣಕ್ಕೆ ತಕ್ಷಣವೇ ಕೇಂದ್ರ ಸರ್ಕಾರ ಹುದ್ದೆ ನೀಡುವುದಿಲ್ಲ. ಕೇಂದ್ರ ಸರ್ಕಾರ ಪ್ರಣಬ್ ಮೊಹಂತಿ ಅವರನ್ನು ಕೇಂದ್ರ ಸೇವೆಗೆ ಕಳುಹಿಸಿಕೊಡಿ ಎಂದು ನಮಗೆ ಪತ್ರ ಬರೆಯಬೇಕು. ಅವರನ್ನು ಕಳುಹಿಸುವುದು ಬಿಡುವುದು ನಮ್ಮ ಆಯ್ಕೆ. ಪಟ್ಟಿಯಲ್ಲಿ ಹೆಸರು ಬಂದ ಮಾತ್ರಕ್ಕೆ ಕಳುಹಿಸಲು ಸಾಧ್ಯವಿಲ್ಲ ಎಂದು ತಿಳಿಸಿದರು.
ಪ್ರಣಬ್ ಮೊಹಂತಿ ರಾಜ್ಯದ ಆಂತರಿಕ ಭದ್ರತಾ ವಿಭಾಗದ ಪೊಲೀಸ್ ಮಹಾನಿರ್ದೇಶಕರಾಗಿದ್ದಾರೆ. ಫೇಕ್ ನ್ಯೂಸ್ ಮತ್ತು ಆನ್‌ಲೈನ್ ಬೆಟ್ಟಿಂಗ್‌ಗೆ ಸಂಬಂಧಿಸಿದಂತೆ ಕಾನೂನು ಮಾಡುವ ಸಂಬಂಧ ಇಂದು ಸಭೆ ನಡೆಯಲಿದೆ. ಈ ಸಭೆಯಲ್ಲಿ ಭಾಗಿಯಾಗಲು ಅವರು ವಿಧಾನಸೌಧಕ್ಕೆ ಬಂದಿದ್ದಾರೆ ಎಂದು ತಿಳಿಸಿದರು.
ಇನ್ನು, ಕೇಂದ್ರ ಸರ್ಕಾರದ ನೇಮಕಾತಿಗಳ ಸಂಪುಟ ಸಮಿತಿ ಸಭೆ ನಡೆಸಿ ವಿವಿಧ ರಾಜ್ಯಗಳಲ್ಲಿ ಕರ್ತವ್ಯದಲ್ಲಿರುವ ಐಪಿಎಸ್ ಅಧಿಕಾರಿಗಳನ್ನು ಕೇಂದ್ರ ಸೇವೆಯ ಅರ್ಹರ ಪಟ್ಟಿಗೆ ಆಯ್ಕೆ ಮಾಡಿತ್ತು. ಎನ್‌ಎಐ, ಸಿಬಿಐ ಸೇರಿ ಕೇಂದ್ರ ಸರ್ಕಾರದ ವಿವಿಧ ತನಿಖಾ ಸಂಸ್ಥೆಗಳ ಮಹಾನಿರ್ದೇಶಕ ಹುದ್ದೆಗೆ ಈ ಅಧಿಕಾರಿಗಳನ್ನು ನೇಮಕ ಮಾಡಿಕೊಳ್ಳಬಹುದಾಗಿದೆ. ನೇಮಕಾತಿಗಳ ಸಂಪುಟ ಸಮಿತಿ ಬಿಡುಗಡೆ ಮಾಡಿದ ಒಟ್ಟು 35 ಅಧಿಕಾರಿಗಳ ಪಟ್ಟಿಯಲ್ಲಿ ಕರ್ನಾಟಕದಿಂದ ಮೊಹಾಂತಿ ಮಾತ್ರ ಆಯ್ಕೆಯಾಗಿರುವುದು ವಿಶೇಷ.



















