ಬೆಂಗಳೂರು: ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಬೇಸಿಗೆ ಮಧ್ಯೆಯೇ ಮುಂಗಾರು ಪೂರ್ವ ಮಳೆ(Pre Monsoon Rain) ಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ (Meteorological Department) ಮುನ್ಸೂಚನೆ ನೀಡಿದೆ.
ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂಗಾರು ಪೂರ್ವ ಮಳೆ ಸುರಿಯಲಿದೆ. ಉತ್ತರ ಒಳನಾಡಿನಲ್ಲಿ ಒಣ ಹವೆ ಮುಂದುವರೆಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ(IMD) ಮುನ್ಸೂಚನೆ ನೀಡಿದೆ.
ಅಲ್ಲದೇ, ಅತ್ಯಂತ ಗರಿಷ್ಠ ಪ್ರಮಾಣದ ತಾಪಮಾನ ಕೂಡ ಈ ವೇಳೆ ದಾಖಲಾಗುತ್ತಿದೆ. ಮಾರ್ಚ್ 7 ರಂದು ಬೆಂಗಳೂರು ನಗರದಲ್ಲಿ ಈ ವರ್ಷದ ಅತ್ಯಂತ ಗರಿಷ್ಠ ತಾಪಮಾನ ದಾಖಲಾಗಿತ್ತು. ಮಾರ್ಚ್ 11 ರಿಂದ 13 ರವರೆಗೆ ಬೆಂಗಳೂರು ನಗರ ಸೇರಿದಂತೆ 12 ಜಿಲ್ಲೆಗಳಲ್ಲಿ ತುಂತುರು ಮಳೆ ಮತ್ತು ಕೆಲವು ಕಡೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.
ಅತಿಯಾದ ತಾಪಮಾನದ ಕಾರಣ ಮುಂಗಾರಪೂರ್ವ ಮಳೆ ನಿರೀಕ್ಷಿಸಲಾಗಿದೆ ಎಂದು ಹವಾಮಾನ ಇಲಾಖೆಯ ಬೆಂಗಳೂರು ಕೇಂದ್ರದ ಮುಖ್ಯಸ್ಥ ಎನ್ ಪುವಿಯರಸನ್ (N Puviarasan) ಹೇಳಿದ್ದಾರೆಂದು ಡೆಕ್ಕನ್ ಹೆರಾಲ್ಡ್ ವರದಿ ಮಾಡಿದೆ.
ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ದಕ್ಷಿಣ ಒಳನಾಡಿನ ಕೋಲಾರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ತುಮಕೂರು, ರಾಮನಗರ, ಮಂಡ್ಯ, ಮೈಸೂರು, ಚಾಮರಾಜನಗರ, ಕೊಡಗು ಮತ್ತು ಹಾಸನ ಮತ್ತು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅಲ್ಲದೇ, ಒತ್ತರ ಒಳನಾಡಿನಲ್ಲಿ ತಾಪಮಾನ ಏರಿಕೆಯಾಗುವ ಸಾಧ್ಯತೆ ಇದೆ. ಮಳೆಯ ಮಧ್ಯೆಯೂ ರಾಜ್ಯಾದ್ಯಂತ ತಾಪಮಾನ ಈ ಬಾರಿ ಹೆಚ್ಚಾಗಿಯೇ ಇರಲಿದ್ದು, ಜನರು ಎಚ್ಚರಿಕೆ ವಹಿಸಬೇಕು ಎಂದು ತಜ್ಞರು ಸಲಹೆ ನೀಡಿದ್ದಾರೆ.