ಬೆಂಗಳೂರು : ಮುಂಬರುವ ಬೇಸಿಗೆಯಲ್ಲಿ ಕೊಳಗೇರಿ ಪ್ರದೇಶಗಳಲ್ಲಿ ಕುಡಿಯುವ ನೀರಿನ ಕೊರತೆ ಉಂಟಾಗದಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (ಜಲಮಂಡಳಿ) ಅಧಿಕಾರಿಗಳಿಗೆ ಜಲಮಂಡಳಿ ಅಧ್ಯಕ್ಷ ಡಾ. ರಾಮ್ ಪ್ರಸಾತ್ ಮನೋಹರ್ ಸೂಚನೆ ನೀಡಿದ್ದಾರೆ.
ನಗರದ ಪಾಂತರಪಾಳ್ಯ ಹಾಗೂ ನಾಯಂಡನಹಳ್ಳಿ ಕೊಳಗೇರಿ ಪ್ರದೇಶಗಳಿಗೆ ಭೇಟಿ ನೀಡಿದ ಅವರು, ಜಲಮಂಡಳಿ ವತಿಯಿಂದ ಕೈಗೊಳ್ಳಲಾಗುತ್ತಿರುವ ಬೇಸಿಗೆ ನಿರ್ವಹಣಾ ಸಿದ್ಧತೆಗಳನ್ನು ಪರಿಶೀಲಿಸಿದರು. ಈ ವೇಳೆ ಸ್ಥಳೀಯರಿಗೆ ನೀರು ಪೂರೈಸಲು ಅಳವಡಿಸಿರುವ ನೀರಿನ ಟ್ಯಾಂಕ್‌ಗಳ ವ್ಯವಸ್ಥೆ ಹಾಗೂ ನೀರು ಸರಬರಾಜಿನ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದಿದ್ದಾರೆ.
ಪರಿಶೀಲನೆ ವೇಳೆ ಸ್ಥಳೀಯ ನಿವಾಸಿಗಳೊಂದಿಗೆ ಸಮಾಲೋಚನೆ ನಡೆಸಿದ ಅವರು, ಜನರ ಅಹವಾಲುಗಳನ್ನು ಆಲಿಸಿದರು. ಮುಂಬರುವ ಬೇಸಿಗೆಯಲ್ಲಿ ಕುಡಿಯುವ ನೀರಿನ ಪೂರೈಕೆಯಲ್ಲಿ ಯಾವುದೇ ವ್ಯತ್ಯಯವಾಗದಂತೆ ಮಂಡಳಿಯಿಂದ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಭರವಸೆ ನೀಡಿದ್ದಾರೆ.
ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನಿರ್ದೇಶನದಂತೆ ಬೇಸಿಗೆಯಲ್ಲಿ ನಗರದಲ್ಲಿ ನೀರಿನ ಸಮಸ್ಯೆ ಉಂಟಾಗದಂತೆ ವಿಶೇಷ ಗಮನ ಹರಿಸಲಾಗುತ್ತಿದೆ ಎಂದು ಹೇಳಿದ್ದಾರೆ.
ಪರಿಶೀಲನೆಯ ಬಳಿಕ ಅಧಿಕಾರಿಗಳಿಗೆ ನಿರ್ದೇಶನ ನೀಡಿದ ಅವರು, ಕಚೇರಿಗೆ ಸೀಮಿತವಾಗದೆ ಫೀಲ್ಡ್‌ನಲ್ಲಿ ಇದ್ದು ಪರಿಸ್ಥಿತಿಯನ್ನು ನಿರಂತರವಾಗಿ ಮೇಲ್ವಿಚಾರಣೆ ಮಾಡಬೇಕು. ವಿಶೇಷವಾಗಿ ಕೊಳಗೇರಿ ಪ್ರದೇಶಗಳಲ್ಲಿ ಕುಡಿಯುವ ನೀರಿನ ಪೂರೈಕೆಯಲ್ಲಿ ಯಾವುದೇ ತೊಂದರೆ ಆಗದಂತೆ ಮುಂಜಾಗ್ರತೆ ವಹಿಸಬೇಕು ಎಂದು ಸೂಚಿಸಿದ್ದಾರೆ.
ಇದನ್ನೂ ಓದಿ : ಹಾಸ್ಟೆಲ್ ವಾರ್ಡನ್ ಸೇರಿ ಹಲವರ ಮೇಲೆ ವಿದ್ಯಾರ್ಥಿ ದಾಳಿ | ಓರ್ವ ಬಾಲಕ ಸಾವು, ಹಲವರಿಗೆ ಗಾಯ



















