ರಾಯಚೂರು: ಬಳ್ಳಾರಿಯಲ್ಲಿ ಬಾಣಂತಿಯರ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ದೊಡ್ಡ ಗೊಂದಲವೇ ಸೃಷ್ಟಿಯಾಗಿತ್ತು. ಈ ವಿಷಯ ರಾಜಕೀಯ ಕೆಸರೆರಚಾಟಕ್ಕೆ ಕಾರಣವಾಗಿತ್ತು. ಇದರ ನಂತರ ಬೆಳಗಾವಿಯಲ್ಲೂ ಬಾಣಂತಿಯರು ಸಾವನ್ನಪ್ಪಿದ್ದರು. ಈ ವಿಷಯ ಅಧಿವೇಶನದಲ್ಲಿ ಭಾರೀ ಸದ್ದು ಮಾಡಿತ್ತು.
ಈಗ ರಾಯಚೂರಿನಲ್ಲೂ ಬಾಣಂತಿಯರ ಸಾವಿನ ವರದಿಯಾಗಿದೆ.
ಸಿಂಧನೂರು (Sindhanur) ತಾಲೂಕು ಆಸ್ಪತ್ರೆಗೆ ಅಕ್ಟೋಬರ್ ತಿಂಗಳಿನಲ್ಲಿ ದಾಖಲಾಗಿದ್ದ ನಾಲ್ವರು ಬಾಣಂತಿಯರು ಒಂದೇ ತಿಂಗಳಲ್ಲಿ ಸಿಸೇರಿಯನ್ ನಂತರ ಸಾವನ್ನಪ್ಪಿದ್ದಾರೆ ಎಂಬ ವಿಷಯ ಬೆಳಕಿಗೆ ಬಂದಿದೆ.
ರಾಯಚೂರು ಜಿಲ್ಲೆಯವರೇಯಾದ ಮೌಸಂಬಿ ಮಂಡಲ್, ಚನ್ನಮ್ಮ, ಚಂದ್ರಕಲಾ, ರೇಣುಕಮ್ಮ ಸಾವನ್ನಪ್ಪಿದ್ದಾರೆ. ಈ ನಾಲ್ವರು ಬಾಣಂತಿಯರಿಗೂ ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಬಳಕೆಯಾಗಿದ್ದ IVದ್ರಾವಣವೇ ನೀಡಲಾಗಿತ್ತು ಎಂದು ಹೇಳಲಾಗುತ್ತಿದೆ. ರಾಜ್ಯದಲ್ಲಿ ಬಾಣಂತಿಯರ ಸಾವಿನ ಪ್ರಕರಣ ದೊಡ್ಡ ಸದ್ದು ಮಾಡುತ್ತಿದ್ದು, ಜನರು ಆತಂಕ ವ್ಯಕ್ತಪಡಿಸುತ್ತಿದ್ದಾರೆ.