ಕಬ್ಬು ಬೆಳೆಗಾರರ ನಿರಂತರ ಹೋರಾಟಕ್ಕೆ ಕೊನೆಗೂ ತಕ್ಕಮಟ್ಟಿನ ಪ್ರತಿಫಲ ಸಿಕ್ಕಿದೆ. ಪ್ರತಿ ಟನ್ ಕಬ್ಬಿಗೆ 3,600 ರೂಪಾಯಿ ದರ ನಿಗದಿಪಡಿಸಲು ಸಕ್ಕರೆ ಕಾರ್ಖಾನೆಗಳು ಒಪ್ಪಿಕೊಂಡಿವೆ ಎನ್ನಲಾಗಿದೆ. ಈ ಬಗ್ಗೆ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಅಧಿಕೃತವಾಗಿ ಘೋಷಿಸಿದ್ದಾರೆ. ಕಳೆದ ಒಂದು ತಿಂಗಳಿನಿಂದ ಪ್ರತಿ ಟನ್ ಕಬ್ಬಿಗೆ 5,500 ರೂಪಾಯಿ ನಿಗದಿಗೆ ಆಗ್ರಹಿಸಿ ರೈತರು ರಾಷ್ಟ್ರೀಯ ಹೆದ್ದಾರಿ ಬಂದ್, ಪಾದಯಾತ್ರೆ, ಕರ್ನಾಟಕ ಬಂದ್ ಹಾಗೂ ಜೈಲ್ ಭರೋ ಚಳವಳಿ ಸೇರಿದಂತೆ ನಾನಾ ರೀತಿಯ ಪ್ರತಿಭಟನೆಗಳನ್ನು ನಡೆಸುತ್ತಿದ್ದರು.
ಜೈಲ್ ಭರೋ ಚಳವಳಿ ತೀವ್ರಗೊಳ್ಳುತ್ತಿದ್ದಂತೆಯೇ ಎಚ್ಚೆತ್ತ ಸಚಿವ ಸತೀಶ್ ಜಾರಕಿಹೊಳಿ ಅವರು ಬುಧವಾರ ಬೆಳಗಾವಿ ಡಿಸಿ ಕಚೇರಿಯಲ್ಲಿ ಸಕ್ಕರೆ ಕಾರ್ಖಾನೆ ಮಾಲೀಕರ ಜೊತೆ ಮಹತ್ವದ ಸಭೆ ನಡೆಸಿದರು. ಈ ಸುದೀರ್ಘ ಚರ್ಚೆಯ ಬಳಿಕ ಬೆಳಗಾವಿ ಜಿಲ್ಲೆಯಲ್ಲಿ ಕಬ್ಬು ಬೆಳೆಯ ಇಳುವರಿ ಪ್ರಮಾಣ ಹೆಚ್ಚಿರುವ ಕಾರಣಕ್ಕೆ ಇಲ್ಲಿ ಮಾತ್ರ ಪ್ರತಿ ಟನ್ಗೆ 3,600 ರೂಪಾಯಿ ನಿಗದಿಪಡಿಸಲಾಗಿದೆ. ಇಳುವರಿ ಕಡಿಮೆ ಇರುವ ಜಿಲ್ಲೆಗಳಲ್ಲಿ ಕಬ್ಬಿಗೆ ಕಡಿಮೆ ದರ ನೀಡಲಾಗುತ್ತದೆ ಎಂದು ಸಚಿವರು ಸ್ಪಷ್ಟಪಡಿಸಿದ್ದಾರೆ.
ಇನ್ನು ಈ ನಿರ್ಧಾರವನ್ನು ನಮ್ಮ ಪ್ರತಿಭಟನೆಗೆ ಸಿಕ್ಕ ಮೊದಲ ಜಯ ಎಂದಿರುವ ರೈತ ಮುಖಂಡ ಚೂನಪ್ಪ ಪೂಜಾರಿ, ಸಚಿವರು ನೇರವಾಗಿ ಹೋರಾಟದ ಸ್ಥಳಕ್ಕೆ ಬಂದು ಅಧಿಕೃತವಾಗಿ ಘೋಷಿಸಬೇಕು ಎಂದು ಪಟ್ಟುಹಿಡಿದಿದ್ದಾರೆ.


















