ಅಂಕೋಲಾ : ಅಂಕೋಲಾ ತಾಲೂಕಿನ ಅಗಸೂರು ಬಳಿ ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಹಳ್ಳಕ್ಕೆ ಉರುಳಿದೆ.
ಉತ್ತರ ಕನ್ನಡ ಜಿಲ್ಲೆಯ ಅಂಕೋಲಾದ ರಾಷ್ಟ್ರೀಯ ಹೆದ್ದಾರಿ 63ರಲ್ಲಿ ಘಟನೆ ನಡೆದಿದೆ. ಬಸ್ ನಲ್ಲಿ 18 ಮಂದಿ ಪ್ರಯಾಣಿಸುತ್ತಿದ್ದರು. ಈಪೈಕಿ ಐವರಿಗೆ ಗಂಭೀರ ಸ್ವರೂಪದ ಗಾಯವಾಗಿದೆ.
ಅಂಕೋಲಾ ಮಾರ್ಗವಾಗಿ ಮಂಗಳೂರಿಗೆ ಖಾಸಗಿ ಬಸ್ ಸಾಗುತ್ತಿತ್ತು. ಅಪಘಾತದಲ್ಲಿ ಗಾಯಗೊಂಡವರನ್ನು ಮಂಗಳೂರು ಆಸ್ಪತ್ರೆಗೆ ರವಾನೆ ಮಾಡಲಾಗಿದೆ ಎಂದು ಮಾಹಿತಿ ಲಭ್ಯವಾಗಿದೆ. ಸಣ್ಣಪುಟ್ಟ ಗಾಯಾಳುಗಳಿಗೆ ಅಂಕೋಲಾ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಅಂಕೋಲಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.