ಬೆಂಗಳೂರು: ರಾಜಾರಾಮ್ ಮೋಹನ್ ರಾಯ್ ರಸ್ತೆಯಲ್ಲಿ ಖಾಸಗಿ ಎಲೆಕ್ಟ್ರಿಕ್ ಬಸ್ ಅಪಘಾತಕ್ಕೀಡಾಗಿದೆ. ಚಾಲಕನ ನಿಯಂತ್ರಣ ತಪ್ಪಿದ ಬಸ್ ಕಾರ್ಪೋರೇಷನ್ ಸರ್ಕಲ್ ಸಂಪರ್ಕಿಸುವ ರಸ್ತೆಯ ಡಿವೈಡರ್ಗೆ ಗುದ್ದಿದೆ. ಬೆಳಗಿನ ಜಾವ 5 ಗಂಟೆ 10 ನಿಮಿಷಕ್ಕೆ ಈ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ ಬಸ್ ಚಾಲಕ ಮತ್ತು ನಿರ್ವಾಹಕನಿಗೆ ಗಾಯಗಳಾಗಿವೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.
ಅಪಘಾತದ ಪರಿಣಾಮ ಕಾರ್ಪೋರೇಷನ್ ಸಂಪರ್ಕಿಸುವ ರಸ್ತೆಯಲ್ಲಿ ಕೆಲಕಾಲ ಟ್ರಾಫಿಕ್ ಜಾಮ್ ಉಂಟಾಗಿತ್ತು. ಹಲಸೂರುಗೇಟ್ ಸಂಚಾರ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಸಂಚಾರ ಪೊಲೀಸರು ಕ್ರೇನ್ ಮೂಲಕ ಬಸ್ ತೆರವುಗೊಳಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ.


















