ಬೆಂಗಳೂರು: ರಾಜ್ಯಪಾಲರು ಸಿಎಂ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡುತ್ತಿದ್ದಂತೆ ಸರ್ಕಾರ ಹಾಗೂ ವಿಪಕ್ಷಗಳ ನಡುವೆ ಜಟಾಪಟಿ ಶುರುವಾಗಿದೆ. ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ (Siddaramaiah) ರಾಜೀನಾಮೆಗೆ ಒತ್ತಾಯಿಸಿ ಪಾದಯಾತ್ರೆ ನಡೆಸಿದ್ದ ಬಿಜೆಪಿ-ಜೆಡಿಎಸ್ ದೋಸ್ತಿ ಈಗ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ ನಡೆಸಿದೆ.
ವಿಧಾನಸೌಧದ ಗಾಂಧಿ ಪ್ರತಿಮೆ ಎದುರು ದೋಸ್ತಿಗಳು ಸೇರಿ ಧರಣಿ ನಡೆಸಿದರು. ವಿಪಕ್ಷ ನಾಯಕ ಆರ್.ಅಶೋಕ್, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ನೇತೃತ್ವದಲ್ಲಿ ಬಿಜೆಪಿ, ಜೆಡಿಎಸ್ ನಾಯಕರು ಪ್ರತಿಭಟನೆ ನಡೆಸಿದರು.
ಈ ಸಂದರ್ಭದಲ್ಲಿ ನಾಯಕರು, ಸಿಎಂ ಸಿದ್ದರಾಮಯ್ಯ ಈ ಹಿಂದೆ ನೀಡಿದ್ದ ಹೇಳಿಕೆಯೊಂದರ ವಿಡಿಯೋ ಪ್ರದರ್ಶನ ಮಾಡಿದ್ದಾರೆ. ಮಾಜಿ ಸಿಎಂ ಯಡಿಯೂರಪ್ಪ ವಿರುದ್ಧ ಅಂದಿನ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ್ದ ಅವಧಿಯಲ್ಲಿ ಸಿದ್ದರಾಮಯ್ಯ ರಾಜೀನಾಮೆಗೆ ಒತ್ತಾಯಿಸಿದ್ದ ವಿಡಿಯೋ ಪ್ರದರ್ಶಿಸಿದ್ದಾರೆ. ವಿಡಿಯೋ ಪ್ಲೇ ಮಾಡಿ, ಸಿದ್ದರಾಮಯ್ಯ ಹೇಳಿಕೆ ನೀಡಿದ್ದ ಆಡಿಯೋ ಪ್ರಸಾರ ಮಾಡಿದ್ದಾರೆ.
ಈಗ ಯಡಿಯೂರಪ್ಪ ಅವರಂತೆ ಕಾನೂನಿಗೆ ತಲೆ ಬಾಗಿ ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡಬೇಕು ಎಂದು ವಿಪಕ್ಷ ನಾಯಕ ಆರ್. ಅಶೋಕ ಒತ್ತಾಯಿಸಿದ್ದಾರೆ. ಸಿದ್ದರಾಮಯ್ಯನವರೇ ಭಂಡತನ ಬಿಟ್ಟು ರಾಜೀನಾಮೆ ಕೊಟ್ಟು ಮನೆಗೆ ನಡೆಯಿರಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಗುಡುಗಿದ್ದಾರೆ.