ಅನುಮತಿ ಇಲ್ಲದೆ ಪ್ರತಿಭಟಿಸಿದ ಆರೋಪದಡಿ ಸಂಸದ ಬಸವರಾಜ ಬೊಮ್ಮಾಯಿ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಸೇರಿದಂತೆ ಬಿಜೆಪಿಯ 28 ಮುಖಂಡರ ವಿರುದ್ಧ ಎಫ್ ಐಆರ್ ದಾಖಲಾಗಿದೆ.
ಈ ಕುರಿತು ಬೆಗಂಳೂರಿನ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದೆ. ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ ಜನ ವಿರೋಧಿಯಾಗಿ ವರ್ತಿಸುತ್ತಿದೆ ಎಂದು ಆರೋಪಿಸಿ 2023ರ ಜೂನ್ 20 ರಂದು ಬಿಜೆಪಿ ಪ್ರತಿಭಟಿಸಿತ್ತು. ರೇಸ್ ಕೋರ್ಸ್ ರಸ್ತೆಯ ಮೌರ್ಯ ವೃತ್ತದಲ್ಲಿ ನಡೆದಿದ್ದ ಪ್ರತಿಭಟನೆ ನೇತೃತ್ವವನ್ನು ಬಸವರಾಜ ಬೊಮ್ಮಾಯಿ ವಹಿಸಿದ್ದರು. ಆದರೆ, ಪ್ರತಿಭಟನೆಗೆ ಅನುಮತಿ ಸಿಕ್ಕಿರಲಿಲ್ಲ.
ಈ ಎಫ್ ಐಆರ್ ನಲ್ಲಿ ವಿಧಾನ ಪರಿಷತ್ ವಿರೋಧ ಪಕ್ಷದ ಮುಖ್ಯ ಸಚೇತಕ ಎನ್. ರವಿಕಮಾರ್, ಸಂಸದ ಪಿ.ಸಿ. ಮೋಹನ್, ಶಾಸಕರಾದ ಎಂ.ಕೃಷ್ಣಪ್ಪ, ಮುನಿರಾಜು, ವಿಪ ಪ್ರತಿ ಪಕ್ಷದ ನಾಯಕ ಚಲವಾದಿ ನಾರಾಯಣಸ್ವಾಮಿ ಸೇರಿದಂತೆ 28 ಜನ ನಾಯಕರ ಹೆಸರುಗಳನ್ನು ಸೇರಿಸಲಾಗಿದೆ.
ಪ್ರತಿಭಟನೆಗೆ ಪೊಲೀಸ್ ಇಲಾಖೆಯ ಅನುಮತಿ ಇಲ್ಲದಿದ್ದರೂ ಪ್ರತಿಭಟನೆ ನಡೆಸಿದವರ ವಿರುದ್ಧ ಕ್ರಮಕ್ಕೆ ಆದೇಶಿಸಲು ಕೋರಿ ವಸಂತನಗರ ನಿವಾಸಿ ಅನಿಲ್ ಕುಮಾರ್ ಮುಳ್ಳೂರು, ನಗರದ 42ನೇ ಎಸಿಎಂಎಂ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಕೋರ್ಟ್ ನಿರ್ದೇಶನದಂತೆ ಎಫ್ ಐಆರ್ ದಾಖಲಿಸಿದೆ ಎಂದು ಪೊಲೀಸರು ಹೇಳಿದ್ದಾರೆ.