ಚಿನ್ನಸ್ವಾಮಿ ಕ್ರೀಡಾಂಗಣದ ಹೊರಗೆ ಉಂಟಾದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಧಾನಸಭೆ ವಿಪಕ್ಷ ನಾಯಕ ಆರ್. ಅಶೋಕ, ಮಾನವ ಹಕ್ಕುಗಳ ಆಯೋಗಕ್ಕೆ ಪತ್ರ ಬರೆದಿದ್ದಾರೆ.
ಬೆಂಗಳೂರಿನಲ್ಲಿ ನಡೆದ ಕಾಲ್ತುಳಿತ ದುರಂತವನ್ನು ತಡೆಯಬಹುದಾಗಿತ್ತು. ಈ ಹಿನ್ನೆಲೆಯಲ್ಲಿ ಜನಸಂದಣಿ ನಿರ್ವಹಣೆ, ಭದ್ರತೆ ಮತ್ತು ಅಗತ್ಯ ಸೌಲಭ್ಯಗಳಲ್ಲಿನ ಸ್ಪಷ್ಟ ಲೋಪಗಳ ಬಗ್ಗೆ ಸಮಗ್ರ ತನಿಖೆ ನಡೆಸಿ ಹೊಣೆಗಾರಿಕೆ ಸ್ಥಾಪಿಸುವ ನಿಟ್ಟಿನಲ್ಲಿ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ತುರ್ತು ಮಧ್ಯಸ್ಥಿಕೆ ವಹಿಸಬೇಕೆಂದು ಪತ್ರದ ಮೂಲಕ ಕೋರಿದ್ದಾರೆ.
ಸಂತ್ರಸ್ತರಿಗೆ ನ್ಯಾಯ ಒದಗಿಸುವುದು ಮತ್ತು ಇಂತಹ ಘಟನೆಗಳು ಮುಂದೆಂದೂ ಮರುಕಳಿಸದಂತೆ ನೋಡಿಕೊಳ್ಳುವುದು ನಮ್ಮ ಕರ್ತವ್ಯವಾಗಿದ್ದು, ಈ ಪ್ರಕರಣದಲ್ಲಿ ರಾಜ್ಯ ಸರ್ಕಾರದ ಸಂವೇದನಾರಹಿತ ಬೇಜವಾಬ್ದಾರಿ ಧೋರಣೆ ಹಿನ್ನೆಲೆಯಲ್ಲಿ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ಮಧ್ಯ ಪ್ರವೇಶ ಅನಿವಾರ್ಯವಾಗಿದೆ ಎಂದು ಕೋರಿದ್ದಾರೆ.