ಬೆಂಗಳೂರು: ಪ್ರತಿಪಕ್ಷ ನಾಯಕ ಆರ್. ಅಶೋಕ್ ಅವರು ನನ್ನ ವೈರಿಯಲ್ಲ, ನಾವಿಬ್ಬರೂ ಆತ್ಮೀಯ ಸ್ನೇಹಿತರು ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ. ಹಿರಿಯೂರು ಉಪಚುನಾವಣೆಗೆ ಸಂಬಂಧಿಸಿದಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಎಲ್ಲಾ ಮಾಹಿತಿ ನೀಡಲಾಗಿದ್ದು, ಮುಂದಿನ ತೀರ್ಮಾನವನ್ನು ರಾಜ್ಯ ನಾಯಕರು ನಾಲ್ಕು ಗೋಡೆಗಳ ಮಧ್ಯೆ ಕುಳಿತು ಚರ್ಚಿಸಿ ಕೈಗೊಳ್ಳುತ್ತೇವೆ ಎಂದು ಅವರು ತಿಳಿಸಿದರು.
ಬೆಂಗಳೂರಿನಲ್ಲಿ ಶುಕ್ರವಾರ ತಮ್ಮ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೈತ್ರಿಕೂಟದ ಟಿಕೆಟ್ ವಿಚಾರದಲ್ಲಿ ಸಾರ್ವಜನಿಕವಾಗಿ ಚರ್ಚೆ ಮಾಡುವ ಅಗತ್ಯವಿಲ್ಲ ಎಂದರು. ಇಲ್ಲಿ ವೈಯಕ್ತಿಕ ಪ್ರತಿಷ್ಠೆಯ ಪ್ರಶ್ನೆ ಬರುವುದಿಲ್ಲ. ವಿಧಾನ ಪರಿಷತ್ ಚುನಾವಣೆಯಲ್ಲಿ ನಾಲ್ಕು ಕ್ಷೇತ್ರಗಳಲ್ಲಿ ಎನ್‌ಡಿಎ ಅಭ್ಯರ್ಥಿಗಳು ಗೆಲುವು ಸಾಧಿಸಿದಂತೆ, ಹಿರಿಯೂರು ಕ್ಷೇತ್ರದಲ್ಲಿಯೂ ಎನ್‌ಡಿಎ ಅಭ್ಯರ್ಥಿ ಗೆಲ್ಲಬೇಕು ಎಂಬುದು ತಮ್ಮ ಅಪೇಕ್ಷೆಯಾಗಿದೆ. ಇದನ್ನೇ ಅಮಿತ್ ಶಾ ಅವರಿಗೆ ತಿಳಿಸಿದ್ದು, ಕ್ಷೇತ್ರದ ವಾಸ್ತವ ಸ್ಥಿತಿಗತಿಯ ವರದಿಯನ್ನು ಗೃಹ ಸಚಿವರಿಗೆ ಸಲ್ಲಿಸಿರುವುದಾಗಿ ಹೇಳಿದರು.
ರಾಜ್ಯದಲ್ಲಿ ಎನ್‌ಡಿಎ ಮೈತ್ರಿಕೂಟ ಗಟ್ಟಿಯಾಗಿದ್ದು, ಕಾಂಗ್ರೆಸ್ ಸರ್ಕಾರದ ಆಡಳಿತದ ವಿರುದ್ಧ ಹೋರಾಟ ನಡೆಸುತ್ತಿದ್ದೇವೆ. ಇಂತಹ ಸಂದರ್ಭದಲ್ಲಿ ಜೆಡಿಎಸ್‌ಗೆ ಟಿಕೆಟ್ ಬೇಕು ಎನ್ನುವ ಪ್ರತಿಷ್ಠೆ ಅಥವಾ ಆತುರ ತಮಗಿಲ್ಲ ಎಂದು ಕುಮಾರಸ್ವಾಮಿ ಸ್ಪಷ್ಟಪಡಿಸಿದರು. ಬಿಡದಿ ಟೌನ್‌ಶಿಪ್, ನೈಸ್, ಕೆಪಿಎಸ್‌ಸಿ ಹಾಗೂ ಸ್ಟಿಂಗ್ ಆಪರೇಷನ್ ಸೇರಿದಂತೆ ಹಲವು ವಿಚಾರಗಳಲ್ಲಿ ಸರ್ಕಾರದ ವಿರುದ್ಧ ಟೀಕಿಸಿ ಹೋರಾಟ ಮಾಡಿದ್ದೇನೆ. ಅದಕ್ಕೆ ಪ್ರತಿಫಲವಾಗಿ ಕೆಟ್ಟದಾಗಿ ಬೈಸಿಕೊಂಡಿದ್ದೇನೆ. ಈ ಎಲ್ಲಾ ಬೆಳವಣಿಗೆಗಳ ಮಾಹಿತಿಯೂ ಅಮಿತ್ ಶಾ ಅವರಿಗೆ ಇದೆ ಎಂದರು.
ಅಮಿತ್ ಶಾ ಭೇಟಿ ಮತ್ತು ಹಿರಿಯೂರು ಚುನಾವಣಾ ತಂತ್ರ
ನವದೆಹಲಿಯ ಭಾರತ ಮಂಟಪದಲ್ಲಿ ನಡೆದ ಮಂತ್ರಿ ಪರಿಷತ್ ಸಭೆಯ ಸಂದರ್ಭದಲ್ಲಿ ಅಮಿತ್ ಶಾ ಅವರು ರಾಜ್ಯದ ರಾಜಕೀಯ ಬೆಳವಣಿಗೆಗಳ ಕುರಿತು ಸಂಕ್ಷಿಪ್ತವಾಗಿ ಚರ್ಚಿಸಿ, ಮರುದಿನ ಭೇಟಿಯಾಗುವಂತೆ ಸೂಚಿಸಿದ್ದರು. ಅದರಂತೆ ಗುರುವಾರ ಸಂಜೆ ದೆಹಲಿಯಲ್ಲಿ ಅವರನ್ನು ಭೇಟಿಯಾಗಿ ಹಿರಿಯೂರು ಉಪಚುನಾವಣೆ ಸೇರಿದಂತೆ ರಾಜ್ಯದ ಪ್ರಮುಖ ವಿಚಾರಗಳ ಬಗ್ಗೆ ಸಮಾಲೋಚನೆ ನಡೆಸಿದ್ದೇನೆ ಎಂದು ಕುಮಾರಸ್ವಾಮಿ ವಿವರಿಸಿದರು.
ಅಮಿತ್ ಶಾ ಅವರು ಕೆಲವು ಮಹತ್ವದ ಸೂಚನೆಗಳನ್ನು ನೀಡಿದ್ದು, ಅದರಂತೆಯೇ ಕಾರ್ಯನಿರ್ವಹಿಸಿ ರಾಜ್ಯ ಬಿಜೆಪಿ ನಾಯಕರೊಂದಿಗೆ ಮಾತುಕತೆ ನಡೆಸುವುದಾಗಿ ಅವರು ಹೇಳಿದರು. ತಮ್ಮ ಪಕ್ಷದವರೇ ಸ್ಪರ್ಧಿಸಬೇಕು ಎನ್ನುವುದಕ್ಕಿಂತ ಮೈತ್ರಿಕೂಟ ಚುನಾವಣೆ ಗೆಲ್ಲುವುದು ಮುಖ್ಯವಾಗಿದೆ.
ಹಿರಿಯೂರಿನಲ್ಲಿ ಕಾಂಗ್ರೆಸ್ ಪಕ್ಷವು ಒಂದೊಂದು ಜಾತಿಗೆ ಒಬ್ಬೊಬ್ಬ ಸಚಿವರನ್ನು ನೇಮಕ ಮಾಡಿದ್ದು, ಅಧಿಕಾರ ಹಾಗೂ ಹಣಬಲದಿಂದ ಚುನಾವಣೆ ನಡೆಸಲು ಮುಂದಾಗಿದೆ. ಎನ್‌ಡಿಎ ನಾಯಕರು ಒಗ್ಗಟ್ಟಿನಿಂದ ಎದುರಿಸದಿದ್ದರೆ ಕಾಂಗ್ರೆಸ್ ಅಡ್ಡಮಾರ್ಗದಲ್ಲಿ ಗೆಲ್ಲುವ ಸಾಧ್ಯತೆ ಇದೆ. ಕ್ಷೇತ್ರದ ನೈಜ ಪರಿಸ್ಥಿತಿಯನ್ನು ಅಮಿತ್ ಶಾ ಅವರ ಗಮನಕ್ಕೆ ತಂದಿದ್ದು, ರಾಜ್ಯದ ಬಿಜೆಪಿ ನಾಯಕರಿಗೂ ಇದನ್ನೇ ಮನವರಿಕೆ ಮಾಡಿಕೊಡುವುದಾಗಿ ತಿಳಿಸಿದರು.
ಆಶಾ ಕಾರ್ಯಕರ್ತೆಯರ ಬೇಡಿಕೆ ಈಡೇರಿಸಲು ಒತ್ತಾಯ
ಭಾರತ್ ಜೋಡೋ ಸಂಘಗಳಿಗೆ ಸಾವಿರ ಕೋಟಿ ರೂಪಾಯಿ ನೀಡಲು ಸರ್ಕಾರದ ಬಳಿ ಹಣವಿದೆ. ಆದರೆ, ನಿರಂತರವಾಗಿ ಜನರ ಆರೋಗ್ಯ ರಕ್ಷಣೆ ಮಾಡುವ ಆಶಾ ಕಾರ್ಯಕರ್ತೆಯರ ಬೇಡಿಕೆಗಳನ್ನು ಈಡೇರಿಸಲು ಹಣವಿಲ್ಲ ಎಂದು ಕುಮಾರಸ್ವಾಮಿ ಅಸಮಾಧಾನ ವ್ಯಕ್ತಪಡಿಸಿದರು.ಸಾರ್ವಜನಿಕರ ತೆರಿಗೆ ಹಣವನ್ನು ಅನಗತ್ಯವಾಗಿ ಪೋಲು ಮಾಡುತ್ತಿರುವ ಸರ್ಕಾರಕ್ಕೆ, ಚಳಿಯನ್ನು ಲೆಕ್ಕಿಸದೆ ಮಕ್ಕಳೊಂದಿಗೆ ಅನಿರ್ದಿಷ್ಟಾವಧಿ ಧರಣಿ ನಡೆಸುತ್ತಿರುವ ಆಶಾ ಕಾರ್ಯಕರ್ತೆಯರ ಸಮಸ್ಯೆ ಕಾಣುತ್ತಿಲ್ಲ. ಕಾಂಗ್ರೆಸ್ ಕಾರ್ಯಕರ್ತರನ್ನು ಪೋಷಿಸುವುದೇ ಸರ್ಕಾರದ ಪ್ರಮುಖ ಕೆಲಸವಾಗಿದೆ ಎಂದು ಅವರು ಆರೋಪಿಸಿದರು.
ಆಶಾ ಕಾರ್ಯಕರ್ತೆಯರು ರಸ್ತೆಯಲ್ಲಿ ಮಲಗಿ ಪ್ರತಿಭಟನೆ ನಡೆಸುತ್ತಿರುವುದು ನಾಗರಿಕ ಸರ್ಕಾರಕ್ಕೆ ಶೋಭೆ ತರುವುದಿಲ್ಲ. ಸರ್ಕಾರ ತಕ್ಷಣವೇ ಅವರ ಬೇಡಿಕೆಗಳಿಗೆ ಸ್ಪಂದಿಸಿ, ಗೌರವಧನ ಹೆಚ್ಚಳ ಹಾಗೂ ಅಗತ್ಯ ಸೌಲಭ್ಯಗಳನ್ನು ಒದಗಿಸಬೇಕು ಎಂದು ಒತ್ತಾಯಿಸಿದರು. ಕೆಲವು ತಿಂಗಳ ಹಿಂದೆ ಆಶಾ ಕಾರ್ಯಕರ್ತೆಯರು ರಾಜ್ಯದಲ್ಲಿ ಪ್ರತಿಭಟನೆ ನಡೆಸಿದಾಗ, ಅವರನ್ನು ದೆಹಲಿಗೆ ಕರೆಸಿಕೊಂಡು ಅಂದಿನ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಖಾತೆ ಸಚಿವೆ ಅನ್ನಪೂರ್ಣ ದೇವಿ ಅವರೊಂದಿಗೆ ಸಭೆ ನಡೆಸಲಾಗಿತ್ತು. ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು ಕೂಡ ಈ ನಿಟ್ಟಿನಲ್ಲಿ ಪ್ರಯತ್ನಿಸಿದ್ದು, ಕಾರ್ಯಕರ್ತೆಯರ ಸಮಸ್ಯೆಗಳ ಬಗ್ಗೆ ತಮಗೂ ಅರಿವಿದೆ ಎಂದು ಕುಮಾರಸ್ವಾಮಿ ಹೇಳಿದರು.


















