ಬೆಂಗಳೂರು: ಮುಡಾ ಹಗರಣದ ಇಕ್ಕಟ್ಟಿಗೆ ಸಿಲುಕಿಸಿ ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕೆಂದು ಪ್ರತಿಪಕ್ಷಗಳು ಆಗ್ರಹಿಸುತ್ತಿವೆ. ಈ ವೇಳೆ ಸಿಎಂ ಬೆನ್ನಿಗೆ ನಿಲ್ಲಬೇಕಾಗಿರುವ ಕಾಂಗ್ರೆಸ್ ನಾಯಕರು, ಅವರು ಕುರ್ಚಿಯಿಂದ ಕೆಳಗೆ ಇಳಿಯುವುದನ್ನೇ ಕಾಯುತ್ತಿರುವಂತಿದೆ. ಹಲವರಂತೂ ಸಿಎಂ ಸ್ಥಾನದ ಕುರಿತು ಬಹಿರಂಗವಾಗಿಯೇ ಮಾತನಾಡುತ್ತಿದ್ದಾರೆ. ಇದು ಕಾಂಗ್ರೆಸ್ ನ ಕೆಲವು ನಾಯಕರಿಗೆ ಇರಿಸು ಮುರಿಸು ತಂದೊಡ್ಡಿದೆ. ಹೀಗಾಗಿ ಹಲವು ನಾಯಕರು ರಾಷ್ಟ್ರೀಯ ನಾಯಕ ರಾಹುಲ್ ಗಾಂಧಿಗೆ ಪತ್ರ ಬರೆದಿದ್ದಾರೆ.
ಹಲವು ನಾಯಕರು ಹಾಗೂ ಅವರ ಬೆಂಬಲಿಗರ ವರ್ತನೆಯಿಂದಾಗಿ ಪಕ್ಷ ಹಾಗೂ ಕಾರ್ಯಕರ್ತರ ಮೇಲೆ ಪರಿಣಾಮ ಬೀರುತ್ತಿದೆ. ಹೀಗಾಗಿ ಇಂತಹ ಹೇಳಿಕೆಗಳನ್ನು ನೀಡದಂತೆ ಎಚ್ಚರಿಕೆ ನೀಡಬೇಕೆಂದು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಗೆ ಕಾಂಗ್ರೆಸ್ ನಾಯಕರು ಪತ್ರ ಬರೆದಿದ್ದಾರೆ.
ಮುಡಾ ಹಗರಣ ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿರುವ ಸಂದರ್ಭದಲ್ಲಿ ಎಂಬಿ ಪಾಟೀಲ್, ಸತೀಶ್ ಜಾರಕಿಹೊಳಿ, ಆರ್ ವಿ ದೇಶಪಾಂಡೆ, ಬಸವರಾಜ ರಾಯರೆಡ್ಡಿ ಎಂದು ಹೇಳಿದ್ದರು. ಇದು ದೊಡ್ಡ ಚರ್ಚೆಗೆ ಕಾರಣವಾಗುತ್ತಿದೆ. ಸಾರ್ವಜನಿಕರು ಈ ಕುರಿತು ಚರ್ಚೆ ನಡೆಸುವಂತಾಗಿತ್ತು. ಇದನ್ನೇ ಆಧಾರವಾಗಿಟ್ಟುಕೊಂಡಿರುವ ಬಿಜೆಪಿ, ರಾಜ್ಯ ಕಾಂಗ್ರೆಸ್ ನಲ್ಲಿ ಸಿದ್ದರಾಮಯ್ಯ ಕುರ್ಚಿ ಅಲುಗಾಡುತ್ತಿದೆ. ಸಿಎಂ ಸ್ಥಾನಕ್ಕಾಗಿ ಪೈಪೋಟಿ ಅಲ್ಲ, ಹೊಡೆದಾಟವೇ ನಡೆಯುತ್ತಿದೆ ಎಂದು ವ್ಯಂಗ್ಯವಾಡಿತ್ತು.
ರಾಜ್ಯದಲ್ಲಿ ಪಕ್ಷದ ನಾಯಕರು ಹಾಗೂ ಕಾರ್ಯಕರ್ತರ ಶ್ರಮದಿಂದ ಕಳೆದ ವಿಧಾನಸಭೆ ಚುನಾವಣೆಯಲ್ಲಿ 135 ಸ್ಥಾನಗಳನ್ನು ರಾಜ್ಯದಲ್ಲಿ ಕಾಂಗ್ರೆಸ್ ಗಳಿಸಿದೆ. ಕಾಂಗ್ರೆಸ್ ನೀಡಿರುವ ಪಂಚ ಗ್ಯಾರಂಟಿಗಳನ್ನು ಸರ್ಕಾರ ಆಡಳಿತಕ್ಕೆ ಬಂದ ಬೆನ್ನಲ್ಲೇ ಜಾರಿಗೊಳಿಸಿದೆ. ಸರ್ಕಾರದ ಈ ನಡೆಯಿಂದ ಕರ್ನಾಟಕದ ಜನರು ಸಂತಸಗೊಂಡಿದ್ದಾರೆ. ಕಳೆದ ಲೋಕಸಭೆ ಚುನಾವಣೆಯಲ್ಲೂ ರಾಜ್ಯದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ನಡುವೆಯೂ ಕಾಂಗ್ರೆಸ್ 9 ಸ್ಥಾನಗಳನ್ನು ಗೆದ್ದಿದೆ. ಬಿಜೆಪಿ ಮತ್ತು ಜೆಡಿಎಸ್ ಜೊತೆಗೂಡಿ ಸರ್ಕಾರವನ್ನು ಅಸ್ಥಿರ ಮಾಡುವ ಪ್ರಯತ್ನ ನಡೆಸುತ್ತಿವೆ. ಈ ಮಧ್ಯೆ ಕಾಂಗ್ರೆಸ್ ನ ಈ ಆಂತರಿಕ ಕಿತ್ತಾಟ, ವಿರೋಧಿಗಳ ನಗೆಗೆ ದಾರಿ ಮಾಡಿಕೊಡುತ್ತಿದೆ ಎಂದು ಹಲವರು ಬೇಸರ ವ್ಯಕ್ತಪಡಿಸುತ್ತಿದ್ದಾರೆ.
ರಾಜ್ಯ ಕಾಂಗ್ರೆಸ್‌ನ ಡಿಕೆ ಶಿವಕುಮಾರ್, ಡಾ ಜಿ ಪರಮೇಶ್ವರ, ಎಂಬಿ ಪಾಟೀಲ್, ಸತೀಶ್ ಜಾರಕಿಹೊಳಿ, ಆರ್ ವಿ ದೇಶಪಾಂಡೆ, ಬಸವರಾಜ ರಾಯರೆಡ್ಡಿ ಸೇರಿ 6 ನಾಯಕರು ಅದರಲ್ಲೂ ಸಚಿವರು ಸಿಎಂ ಸ್ಥಾನಕ್ಕೆ ನಾವೂ ಆಕಾಂಕ್ಷಿಗಳು ಎಂದು ಹೇಳಿಕೆಯನ್ನು ನೀಡುತ್ತಿದ್ದಾರೆ. ಇದರಿಂದ ರಾಜ್ಯದ ಜನರು ನಮ್ಮ ಸರ್ಕಾರ ಮತ್ತು ಪಕ್ಷದ ಮೇಲಿನ ನಂಬಿಕೆಯನ್ನು ಕಳೆದುಕೊಳ್ಳುವಂತಾಗಿದೆ. ಇದು ಕಾರ್ಯಕರ್ತರ ಮೇಲೆ ಪರಿಣಾಮ ಬೀರುತ್ತಿದೆ. ಹೀಗಾಗಿ ಸಿಎಂ ಸ್ಥಾನದ ಆಕಾಂಕ್ಷಿಗಳು ಎಂದು ಹೇಳಿಕೆ ಕೊಡುತ್ತಿರುವ ಸಚಿವರು ಹಾಗೂ ಮುಖಂಡರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಪತ್ರದಲ್ಲಿ ಒತ್ತಾಯಿಸಲಾಗಿದೆ.