ಜೈಪುರ: ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಪಾಸ್ ಪೋರ್ಟ್ ರದ್ದುಗೊಳಿಸಬೇಕೆಂದು ಆಗ್ರಹಿಸಿ ಸ್ಪೀಕರ್ ಓಂ ಬಿರ್ಲಾ ಅವರಿಗೆ ಮನವಿ ಮಾಡಲಾಗಿದೆ.
ರಾಹುಲ್ ಇತ್ತೀಚಿನ ತಮ್ಮ ಅಮೆರಿಕ ಪ್ರವಾಸದ ಸಂದರ್ಭದಲ್ಲಿ ಸಿಖ್ ಸಮುದಾಯಗಳ ಧಾರ್ಮಿಕ ಭಾವನೆಗೆ ಧಕ್ಕೆ ತಂದಿದ್ದಾರೆ. ಮೀಸಲಾತಿ ಕುರಿತು ವಿವಾದಾತ್ಮಕ ಹೇಳಿಕೆ ನೀಡಿದ ಆರೋಪದಡಿ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಪಾಸ್ ಪೋರ್ಟ್ ರದ್ದುಗೊಳಿಸುವಂತೆ ಕೋರಿ ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರಿಗೆ ಬಿಜೆಪಿ ಸಂಸದ ಸಿ.ಪಿ. ಜೋಶಿ ಪತ್ರ ಬರೆದಿದ್ದಾರೆ.
ರಾಹುಲ್ ತಮ್ಮ ಸ್ಥಾನ ದುರುಪಯೋಗಪಡಿಸಿಕೊಂಡಿದ್ದಾರೆ. ಹೀಗಾಗಿ ಅವರು ವಿರೋಧ ಪಕ್ಷದ ನಾಯಕ ಸ್ಥಾನಕ್ಕೆ ರಾಜೀನಾಮೆ ನೀಡುವುದು ಅತ್ಯಗತ್ಯ ಎಂದು ಸ್ಪೀಕರ್ ಗೆ ಬರೆದ ಪತ್ರದಲ್ಲಿ ರಾಜಸ್ಥಾನದ ಚಿತ್ತೋರ್ ಗಢದ ಬಿಜೆಪಿ ಸಂಸದ ಜೋಶಿ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
‘ರಾಹುಲ್ ಗಾಂಧಿಯವರ ಹೇಳಿಕೆಗಳು ಕೇವಲ ರಾಜಕೀಯವಲ್ಲ. ಅವರ ದೇಶ ವಿರೋಧಿ ಮನಸ್ಥಿತಿಯ ಭಾಗವಾಗಿದೆ. ಅವರ ಹೇಳಿಕೆಗಳಿಂದ ದೇಶದ ಸ್ಥಿರತೆ ಮತ್ತು ಅಂತರರಾಷ್ಟ್ರೀಯ ಸಂಬಂಧಗಳಿಗೆ ಧಕ್ಕೆ ಉಂಟಾಗುವ ಸಾಧ್ಯತೆ ಇದೆ ಎಂದು ಆರೋಪಿಸಿದ್ದಾರೆ.
ಅಭಿವ್ಯಕ್ತಿ ಸ್ವಾತಂತ್ರ್ಯದ ಹೆಸರಿನಲ್ಲಿ ದೇಶದ ಪ್ರತಿಷ್ಠೆಗೆ ಧಕ್ಕೆ ತರುವ ಹೇಳಿಕೆಗಳನ್ನು ಸಮರ್ಥಿಸಲಾಗುವುದಿಲ್ಲ. ಹೀಗಾಗಿ ಕೂಡಲೇ ಗಾಂಧಿಯವರ ಪಾಸ್ ಪೋರ್ಟ್ ನ್ನು ರದ್ದುಪಡಿಸಬೇಕು’ ಎಂದು ಜೋಶಿ ಒತ್ತಾಯಿಸಿದ್ದಾರೆ.