ಉಡುಪಿ : ಇತ್ತೀಚೆಗೆ ಕೊಡಗು ಜಿಲ್ಲೆಯ ಹೋಂ ಸ್ಟೇ ಒಂದರಲ್ಲಿ ನಡೆದ ವಿದೇಶಿ ಮಹಿಳೆಯ ಮೇಲಿನ ಅತ್ಯಾಚಾರ ಪ್ರಕರಣದ ಬೆನ್ನಲ್ಲೇ ಪೊಲೀಸ್ ಮಹಾನಿರ್ದೇಶಕರು ಮತ್ತು ಪೊಲೀಸ್ ಮಹಾ ನಿರೀಕ್ಷಕರು ಹಾಗೂ ಹೆಚ್ಚುವರಿ ಪೊಲೀಸ್ ಮಹಾ ನಿರ್ದೇಶಕರ ನಿರ್ದೇಶನದಂತೆ ಉಡುಪಿ ಜಿಲ್ಲೆಯಲ್ಲಿ ವಿಶೇಷ ಕಾರ್ಯಾಚರಣೆಯನ್ನು ನಡೆಸಲಾಗಿದೆ.

ಈ ವೇಳೆ ಜಿಲ್ಲೆಯಲ್ಲಿ ಒಟ್ಟು 32 ಅಕ್ರಮ ಹೋಂ ಸ್ಟೇ ಇರುವುದು ಕಂಡುಬಂದಿದೆ. ಉಡುಪಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯ 3, ಮಲ್ಪೆ ಪೊಲೀಸ್ ಠಾಣೆಯ 15, ಮಣಿಪಾಲ ಪೊಲೀಸ್ ಠಾಣಾ ವ್ಯಾಪ್ತಿಯ 2, ಕೋಟ ಪೊಲೀಸ್ ಠಾಣಾ ವ್ಯಾಪ್ತಿಯ 7, ಪಡುಬಿದ್ರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 5 ಅಕ್ರಮ ಹೋಂಸ್ಟೇ ಇರುವುದು ಬೆಳಕಿಗೆ ಬಂದಿದೆ. ಈ ಸಂಬಂಧ ಪ್ರಕರಣ ದಾಖಲಿಸಲಾಗಿದ್ದು, 32 ಅಕ್ರಮ ಹೋಂಸ್ಟೇ ವಿರುದ್ದ ನಿಯಮಾನುಸಾರ ಕ್ರಮ ಕೈಗೊಳ್ಳುವಂತೆ ಜಿಲ್ಲಾ ಪ್ರವಾಸೋದ್ಯಮ ಇಲಾಖೆಗೆ ವರದಿ ನೀಡಲಾಗಿದೆ.

ಇನ್ನು, ಹೋಂಸ್ಟೇ/ರೆಸಾರ್ಟ್‌ಗಳು ಪರವಾನಿಗೆ ನಿಯಮ ಹಾಗೂ ನಿಬಂಧನೆಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ನಿಯಮ ಹಾಗೂ ನಿಬಂಧನೆಗಳನ್ನು ಕಟ್ಟುನಿಟ್ಟಾಗಿ ಪಾಲಿಸದೇ ಇರುವ ಹೋಂಸ್ಟೇ/ರೆಸಾರ್ಟ್‌ಗಳ ಪರವಾನಿಗೆಯನ್ನು ರದ್ದುಪಡಿಸಲು ಕ್ರಮ ಕೈಗೊಳ್ಳಲಾಗುವುದು.
ಹೋಂಸ್ಟೇ/ರೆಸಾರ್ಟ್‌ಗಳಿಗೆ ಯಾವುದೇ ವಿದೇಶಿಯರು ಆಗಮಿಸಿದಾಗ ನಿಯಾಮಾನುಸಾರ ಅವರ ವಿವರಗಳನ್ನು ಒಳಗೊಂಡ Form-Cಯನ್ನು FRRO (Foreigners Regional Registration Office) online ಮೂಲಕ ಕಡ್ಡಾಯವಾಗಿ ಅಪ್ಲೋಡ್ ಮಾಡಬೇಕು. ಈ ಮಾಹಿತಿಯನ್ನು ಸ್ಥಳೀಯ ಪೊಲೀಸ್ ಠಾಣೆಗೆ ನೀಡಬೇಕು. ಹೋಂಸ್ಟೇ/ರೆಸಾರ್ಟ್‌ಗಳಲ್ಲಿ ವಾಸವಾಗಿರುವ ವಿದೇಶಿಯರ ಭದ್ರತೆಯ ಬಗ್ಗೆ ಹೆಚ್ಚಿನ ನಿಗಾ ವಹಿಸಬೇಕು ಎಂದು ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಂ ಶಂಕರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇದನ್ನೂ ಓದಿ : ಉಡುಪಿಯಲ್ಲಿ ನಾಗದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟಿ ಪೂಜಾ ಹೆಗ್ಡೆ



















