ತಮಿಳುನಾಡು : ಈಶಾನ್ಯ ಮಾನ್ಸೂನ್ ತಮಿಳುನಾಡಿನಲ್ಲಿ ತೀವ್ರವಾಗಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ಎಂಟು ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.
ಭಾರಿ ಮಳೆ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಅವರು ಪರಿಸ್ಥಿತಿಯನ್ನು ಅವಲೋಕಿಸುತ್ತಿದ್ದು, ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವ ಕುರಿತು ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.
ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುತ್ತಿದ್ದು ಚೆನ್ನೈನಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಸಿಎಂ ಸ್ಟಾಲಿನ್ ನಗರದಲ್ಲಿ ಮತ್ತು ಸುತ್ತಮುತ್ತಲ ಪ್ರದೇಶಗಳು ಹಾಗೂ ಕಾವೇರಿ ಜಲಾನಯನ ಪ್ರದೇಶದ ಜಿಲ್ಲೆಗಳಲ್ಲಿ ಮುನ್ನೆಚ್ಚರಿಕಾ ಕ್ರಮಗಳನ್ನು ತೆಗೆದುಕೊಳ್ಳುವಂತೆ ಡಿಸಿಗಳಿಗೆ ತಿಳಿಸಿದ್ದಾರೆ.
ವಿಲ್ಲುಪುರಂ, ಕಡಲೂರು, ಮೈಲಾಡುತುರೈ, ನಾಗಪಟ್ಟಣಂ, ತಿರುವಲ್ಲೂರು, ತಂಜಾವೂರು, ಪುದುಕೊಟ್ಟೈ ಮತ್ತು ರಾಮನಾಥಪುರಂಗಳಿಗೆ ರೆಡ್ ಅಲರ್ಟ್ ನೀಡಲಾಗಿದೆ ಎಂದು ಪ್ರಾದೇಶಿಕ ಹವಾಮಾನ ಕೇಂದ್ರದ (ಆರ್‌ಎಂಸಿ) ಅಧಿಕಾರಿಯೊಬ್ಬರು ತಿಳಿಸಿದರು. ನೆರೆಯ ಪುದುಚೇರಿ ಕೇಂದ್ರಾಡಳಿತ ಪ್ರದೇಶಕ್ಕೂ ಇದೇ ರೀತಿಯ ಎಚ್ಚರಿಕೆ ನೀಡಲಾಗಿದೆ.
ಉತ್ತರ ಕರಾವಳಿಯ ತೀರದಲ್ಲಿ ಜೋರು ಮಳೆಯಾಗುತ್ತಿದೆ. ಚೆನ್ನೈ, ತಿರುವಳ್ಳೂರು, ಚೆಂಗಲ್ಪೆಟ್ಟು, ಕಾಂಚೀಪುರಂ, ಕಲಾಕುರಿಚಿ, ಅರಿಯಲೂರು, ಪೆರಂಬಲೂರು, ತೂಥಕುಡಿ, ತಿರುನೆಲ್ವೇಲಿ ಮತ್ತು ಕನ್ಯಾಕುಮಾರಿಯಲ್ಲಿ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.