ಬೆಂಗಳೂರು: ರಾಜ್ಯದಲ್ಲಿ ಬಿರು ಬಿಸಿಲು ಮುಂದುವರೆದಿದ್ದು, ಇದರ ಮಧ್ಯೆಯೂ ಕೆಲವೆಡೆ ಮಳೆಯಾಗುತ್ತಿದೆ. ಇಂದು ಕೂಡ ರಾಜ್ಯದ ಕೆಲವು ಜಿಲ್ಲೆಗಳಿಗೆ ಮಳೆಯ ಮುನ್ಸೂಚನೆ ನೀಡಲಾಗಿದೆ.
ಸಿಲಿಕಾನ್ ಸಿಟಿಯಲ್ಲಿ ಬೆಳಗ್ಗೆಯಿಂದಲೇ ಮೋಡಕವಿದ ವಾತಾವರಣವಿದೆ. ಅಲ್ಲದೇ, ನಗರದಲ್ಲಿ ಏಪ್ರಿಲ್ 3ರಿಂದ ಮಳೆ (Rain) ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇನ್ನುಳಿದಂತೆ ಕರಾವಳಿಯ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಗದಗ, ಹಾವೇರಿ, ದಕ್ಷಿಣ ಒಳನಾಡಿನ ಹಾಗೂ ಮಲೆನಾಡಿನ ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಶಿವಮೊಗ್ಗದಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಈಗಾಗಲೇ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗುತ್ತಿದ್ದು, ಹಲವೆಡೆ ಸಾಕಷ್ಟು ಅವಾಂತರಗಳೇ ನಡೆದಿವೆ. ಬೆಂಗಳೂರು ಅಷ್ಟೇ ಅಲ್ಲದೇ, ಏಪ್ರಿಲ್ 3ರಂದು ತುಮಕೂರು, ಶಿವಮೊಗ್ಗ, ಮೈಸೂರು, ಕೋಲಾರ, ಕೊಡಗು, ಹಾಸನ, ದಾವಣಗೆರೆ, ಚಿಕ್ಕಮಗಳೂರು, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಚಾಮರಾಜನಗರ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಸೋಮವಾರ ಕಲಬುರಗಿಯಲ್ಲಿ 40.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, ಚಾಮರಾಜನಗರದಲ್ಲಿ 14.7 ಡಿಗ್ರಿ ಸೆಲ್ಸಿಯಸ್ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ.