ಬೆಂಗಳೂರು: ಫೆಂಗಲ್ ಚಂಡಮಾರುತ ಬೀಸಿರುವ ಹಿನ್ನೆಲೆಯಲ್ಲಿ ಚಳಿಗಾಲದಲ್ಲಿಯೂ ರಾಜ್ಯಕ್ಕೆ ಮಳೆಯ ಮುನ್ಸೂಚನೆ ನೀಡಲಾಗಿದೆ.
ಬೆಂಗಳೂರು (Bengaluru) ಸೇರಿದಂತೆ ರಾಜ್ಯದ ಹಲವೆಡೆ ಭಾನುವಾರ ವ್ಯಾಪಕ ಮಳೆಯಾಗುವ ಮುನ್ಸೂಚನೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ರಾಜ್ಯದ ದಕ್ಷಿಣ ಒಳನಾಡು, ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಡಿ. 3ರ ವರೆಗೂ ಮಳೆ ಮುಂದುವರೆಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಕೋಲಾರ, ಚಿಕ್ಕಮಗಳೂರು, ಚಾಮರಾಜನಗರ ಜಿಲ್ಲೆಗಳಲ್ಲಿ ಮಳೆಯ ಮುನ್ಸೂಚನೆ ನೀಡಲಾಗಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿಯೂ ಉತ್ತಮವಾಗಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ದಕ್ಷಿಣ ಒಳನಾಡು, ಮಲೆನಾಡು ಪ್ರದೇಶದ ಕೆಲವು ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆ ಇದೆ. ಫೆಂಗಲ್ ಚಂಡಮಾರುತದಿಂದಾಗಿ ಬೃಹತ್ ಗಾತ್ರದ ಅಲೆಗಳು ದಡಕ್ಕೆ ಅಪ್ಪಳಿಸುವ ಸಾಧ್ಯತೆ ಇದೆ. ಹೀಗಾಗಿ ಸಮುದ್ರ ತೀರ ಪ್ರದೇಶದಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಬೆಂಗಳೂರಿನಲ್ಲಿ ಶನಿವಾರ ರಾತ್ರಿಯಿಂದ ತುಂತುರು ಮಳೆಯಾಗುತ್ತಿದೆ.