ಬೆಂಗಳೂರು:ರಾಜ್ಯದಲ್ಲಿ ಬಿಸಿಲಿನ ಮಧ್ಯೆಯೂ ಮುಂಗಾರು ಪೂರ್ವ ಮಳೆ ಸದ್ದು ಮಾಡುತ್ತಿದೆ. ಬಂಗಾಳಕೊಲ್ಲಿಯಲ್ಲಿ ಚಂಡಮಾರುತ ರೂಪುಗೊಂಡಿರುವ ಹಿನ್ನೆಲೆಯಲ್ಲಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ(Rain)ಯಾಗುತ್ತಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರಾವಳಿ ಸೇರಿದಂತೆ ಇಂದು 14 ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಹೀಗಾಗಿ ಆ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ವಿಜಯನಗರ, ತುಮಕೂರು, ಶಿವಮೊಗ್ಗ, ಹಾಸನ, ಚಿತ್ರದುರ್ಗ, ಚಿಕ್ಕಮಗಳೂರು, ಬಳ್ಳಾರಿ, ಹಾವೇರಿ, ತುಮಕೂರು, ವಿಜಯನಗರ, ಧಾರವಾಡ, ಬೀದರ್, ಬೀದರ್, ಬೆಳಗಾವಿ, ಉತ್ತರ ಕನ್ನಡ, ಉಡುಪಿ ಹಾಗೂ ದಕ್ಷಿಣ ಕನ್ನಡದಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಅಲ್ಲದೇ, ಇನ್ನುಳಿದಂತೆ ಗದಗ, ಕೊಪ್ಪಳ, ರಾಯಚೂರು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ದಾವಣಗೆರೆ, ಕೋಲಾರ, ಮಂಡ್ಯ, ರಾಮನಗರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಗುರುವಾರ ಕಲಬುರಗಿಯಲ್ಲಿ 37.6 ಡಿಗ್ರಿ ಸೆಲ್ಸಿಯಸ್ ಅತ್ಯಂತ ಗರಿಷ್ಠ ಉಷ್ಣಾಂಶ ರಾಜ್ಯದಲ್ಲಿ ದಾಖಲಾಗಿತ್ತು. ಹಲವು ಜಿಲ್ಲೆಗಳಲ್ಲಿ ಮಳೆಯಾಗಿದೆ. ಬೆಂಗಳೂರಿನಲ್ಲಿ ಸುರಿದ ಮಳೆಗೆ ಜನ ಹೈರಾಣಾಗಿದ್ದಾರೆ.