ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ಇದ್ದು, ಎಚ್ಚರಿಕೆಯಿಂದ ಇರುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ.
ಈಗಾಗಲೇ ರಾಜ್ಯದ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುತ್ತಿದೆ. ಈ ಮೂಲಕ ಮುಂಗಾರು ಆರಂಭವಾಗುವ ಸುಳಿವು ನೀಡಿದೆ. ಹೀಗಾಗಿ ಮಳೆಯಿಂದಾಗುವ ಹಾನಿ ಎದುರಿಸಲು ಸಿದ್ಧತೆ ಮಾಡಿಕೊಳ್ಳುವಂತೆ ಪ್ರಾದೇಶಿಕ ಆಯುಕ್ತರು, ಡಿಸಿಗಳು ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ ಕಂದಾಯ ಇಲಾಖೆ (Revenue Department) ಪತ್ರ ಬರೆದಿದೆ ಎನ್ನಲಾಗಿದೆ.
ಭಾರತೀಯ ಹವಾಮಾನ ಇಲಾಖೆಯ ಮುನ್ಸೂಚನೆಯ ಪ್ರಕಾರ, ಈ ವರ್ಷ ದೇಶಾದ್ಯಂತ ಶೇ. 104 ರಷ್ಟು ಮಳೆಯಾಗುವ ನಿರೀಕ್ಷೆಯಿದೆ. ಕರ್ನಾಟಕದಲ್ಲಿಯೂ ಭಾರೀ ಮಳೆಯಾಗುವ ಮುನ್ಸೂಚನೆ ಇದೆ. ಹೀಗಾಗಿ ಯಾವುದೇ ಅನಾಹುತ ನಡೆಯದಂತೆ ನೋಡಿಕೊಳ್ಳಬೇಕೆಂದು ಸೂಚಿಸಲಾಗಿದೆ. ಯಾವುದೇ ಪರಿಸ್ಥಿತಿಯನ್ನು ಎದುರಿಸಲು ಸಿದ್ಧತೆಗಾಗಿ ಇತರ ಇಲಾಖೆಗಳೊಂದಿಗೆ ಸಭೆ ನಡೆಸಿ ಜವಾಬ್ದಾರಿಗಳನ್ನು ಹಂಚುವ ಅಗತ್ಯವೂ ಇದೆ ಎಂದು ಅಧಿಕಾರಿಗಳಿಗೆ ಸೂಚಿಸಲಾಗಿದೆ.