ಬೆಂಗಳೂರು: ಕಳೆದ ಕೆಲ ದಿನಗಳಿಂದ ತೀವ್ರ ಬಿಸಿಲಿನಿಂದ ಬಳಲುತ್ತಿದ್ದ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಇಂದು ಹಲವೆಡೆ ಉತ್ತಮ ಮಳೆಯಾಗಿದ್ದು, ಜನರಿಗೆ ಕೊಂಚ ನೆಮ್ಮದಿ ತಂದಿದೆ.
ನಗರದ ವಿವಿಧ ಪ್ರದೇಶಗಳಲ್ಲಿ ಸುರಿದ ಮಳೆಯಿಂದ ತಾಪಮಾನ ಇಳಿಕೆಯಾಗಿದ್ದು, ವಾತಾವರಣ ತಂಪಾಗಿದೆ. ಕೆಲ ದಿನಗಳಿಂದ ಕಾಡುತ್ತಿದ್ದ ಬಿಸಿಲಿನ ಬೇಗೆಗೆ ಮಳೆ ತಾತ್ಕಾಲಿಕ ವಿರಾಮ ನೀಡಿದೆ.
ಮಳೆಯ ಹಿನ್ನೆಲೆಯಲ್ಲಿ ವಾಹನ ಸವಾರರು ಹಗಲಿನ ವೇಳೆಯಲ್ಲೇ ಹೆಡ್‌ಲೈಟ್‌ಗಳನ್ನು ಆನ್ ಮಾಡಿಕೊಂಡು ಸಂಚರಿಸುವ ಪರಿಸ್ಥಿತಿ ನಿರ್ಮಾಣವಾಗಿತ್ತು. ಹಲವು ರಸ್ತೆಗಳಲ್ಲಿ ಮಳೆ ನೀರು ನಿಂತ ಪರಿಣಾಮ ವಾಹನ ಸಂಚಾರ ನಿಧಾನಗತಿಯಲ್ಲಿ ಸಾಗಿತು.
ಮಳೆಯಿಂದ ನಗರದ ಪ್ರಮುಖ ಜಂಕ್ಷನ್‌ಗಳಲ್ಲಿ ಟ್ರಾಫಿಕ್ ದಟ್ಟಣೆ ಉಂಟಾಗಿದ್ದು, ಕಚೇರಿಯಿಂದ ಮನೆಗೆ ತೆರಳುತ್ತಿದ್ದ ಸಾರ್ವಜನಿಕರು ಪರದಾಡಿದರು. ಪಾದಚಾರಿಗಳು ಹಾಗೂ ದ್ವಿಚಕ್ರ ವಾಹನ ಸವಾರರು ಮಳೆಯಿಂದ ತೊಂದರೆ ಅನುಭವಿಸಿದ ದೃಶ್ಯಗಳು ಕಂಡುಬಂದವು.
ಇನ್ನು, ಹವಾಮಾನ ಇಲಾಖೆ ಮುಂದಿನ ದಿನಗಳಲ್ಲೂ ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಕೆಲ ಭಾಗಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ನೀಡಿದೆ.



















