ಬೆಂಗಳೂರು: ರಾಜ್ಯದ ಎಲ್ಲೆಡೆ ಈಗ ಜನರಿಗೆ ಚಳಿಯ ಅನುಭವವಾಗುತ್ತಿದೆ. ಈ ಮಧ್ಯೆ ಹವಾಮಾನ ಇಲಾಖೆ ಮತ್ತೆ ಮಳೆಯ ಮುನ್ಸೂಚನೆ ನೀಡಿದ್ದು, ಜನರು ಹವಾಮಾನ ವೈಪರೀತ್ಯಕ್ಕೆ ಆತಂಕ ವ್ಯಕ್ತಪಡಿಸುವಂತಾಗಿದೆ.
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಿನ್ನೆಲೆಯಲ್ಲಿ ಶನಿವಾರ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಶನಿವಾರ ಬೆಳಗ್ಗೆಯಿಂದ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಇರಲಿದೆ. ದಕ್ಷಿಣ ಒಳನಾಡಿನ ಕೋಲಾರ, ಚಿಕ್ಕಮಂಗಳೂರು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ರಾಮನಗರ ಮತ್ತು ಚಾಮರಾಜನಗರ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಅಲ್ಲದೇ, ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳು ಮತ್ತು ಮಳೆನಾಡು ಜಿಲ್ಲೆಗಳಲ್ಲಿ ಡಿಸೆಂಬರ್ 1 ರಿಂದ ಡಿಸೆಂಬರ್ 3 ರ ವರೆಗೆ ಗುಡುಗು, ಮಿಂಚು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ತುಂತುರು ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ನೀಡಿದೆ.