ಬೆಂಗಳೂರು: ರಾಜ್ಯದ ಹವಾಮಾನದಲ್ಲಿ ಬದಲಾವಣೆ ಮುಂದುವರಿದಿದ್ದು, ನವೆಂಬರ್ 26ರವರೆಗೆ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಈಗಾಗಲೇ ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಕೆಲವೆಡೆ ಮಳೆಯಾಗಿದ್ದು, ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲಿ ಒಣ ಹವಾಮಾನ ಮುಂದುವರಿದಿದೆ. ರಾಜ್ಯದ ಕನಿಷ್ಠ ತಾಪಮಾನದಲ್ಲಿ ದೊಡ್ಡ ಬದಲಾವಣೆಯಿಲ್ಲದಿದ್ದರೂ, ಏರಿಕೆಯ ಪ್ರವೃತ್ತಿ ಕಂಡುಬರಲಿದೆ.
ನವೆಂಬರ್ 25ರಂದು ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಹಾಗೂ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ ಮತ್ತು ತುಮಕೂರು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ. ಈ ವೇಳೆ ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ, ವಿಜಯನಗರ ಮತ್ತು ಉತ್ತರ ಒಳನಾಡಿನ ಎಲ್ಲಾ ಜಿಲ್ಲೆಗಳಲ್ಲಿ ಒಣ ಹವಾಮಾನ ಇರಲಿದೆ.
ಇನ್ನು ನವೆಂಬರ್ 26ರಂದು ದಕ್ಷಿಣ ಕನ್ನಡ, ಉಡುಪಿ ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳ ಜೊತೆಗೆ ದಾವಣಗೆರೆಯಲ್ಲೂ ಮಳೆಯಾಗಲಿದ್ದು, ಉತ್ತರ ಕನ್ನಡ, ಬಳ್ಳಾರಿ, ಚಿತ್ರದುರ್ಗ, ವಿಜಯನಗರ ಹಾಗೂ ಉತ್ತರ ಒಳನಾಡಿನಲ್ಲಿ ಒಣ ಹವಾಮಾನ ಮುಂದುವರಿಯಲಿದೆ.


















