ಲಖನೌ: ರಾಮಜನ್ಮಭೂಮಿ ಅಯೋಧ್ಯೆಯಲ್ಲಿರುವ ರಾಮಮಂದಿರದ ಪ್ರಧಾನ ಅರ್ಚಕ ಆಚಾರ್ಯ ಸತ್ಯೇಂದ್ರ ದಾಸ್ (Acharya Satyendra Das) (85) ಅವರು ನಿಧನರಾಗಿದ್ದಾರೆ. ಆಚಾರ್ಯ ಸತ್ಯೇಂದ್ರ ದಾಸ್ ಅವರು ಲಖನೌನಲ್ಲಿ ಬುಧವಾರ ಬೆಳಗ್ಗೆ 7 ಗಂಟೆಗೆ ನಿಧನರಾಗಿದ್ದಾರೆ ಎಂಬುದಾಗಿ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ತಿಳಿಸಿದೆ.
ಫೆಬ್ರವರಿ 3ರಂದು ಆಚಾರ್ಯ ಸತ್ಯೇಂದ್ರ ದಾಸ್ ಅವರು ಪಾರ್ಶ್ವವಾಯುಗೆ ತುತ್ತಾಗಿದ್ದರು. ಮಿದುಳಿನಲ್ಲಿ ತೀವ್ರ ರಕ್ತಸ್ರಾವ ಉಂಟಾಗಿದ್ದರಿಂದ ಲಖನೌನಲ್ಲಿರುವ ಸಂಜಯ್ ಗಾಂಧಿ ಪೋಸ್ಟ್ ಗ್ರಾಜ್ಯುಯೇಟ್ ಇನ್ ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ (ಎಸ್ ಜಿ ಪಿಜಿಐ) ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಿಸದೆ ಅವರು ನಿಧನರಾಗಿದ್ದಾರೆ ಎಂದು ತಿಳಿದುಬಂದಿದೆ.
ಕೆಲ ದಿನಗಳಿಂದ ಪ್ರಧಾನ ಅರ್ಚಕರು ಆಸ್ಪತ್ರೆಯಲ್ಲೇ ಚಿಕಿತ್ಸೆ ಪಡೆಯುತ್ತಿದ್ದರು. ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಕೂಡ ಆಸ್ಪತ್ರೆಗೆ ತೆರಳಿ ಆಚಾರ್ಯರ ಆರೋಗ್ಯ ವಿಚಾರಿಸಿದ್ದರು. ಪ್ರಧಾನ ಅರ್ಚಕರು ನಿಧನರಾದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಸಂತಾಪ ಸೂಚಿಸಿದ್ದಾರೆ. “ಆಚಾರ್ಯರ ನಿಧನದ ಸುದ್ದಿ ತಿಳಿದು ಅತೀವ ದುಃಖವಾಗಿದೆ. ಸಾಮಾಜಿಕ ಹಾಗೂ ಧಾರ್ಮಿಕ ಕ್ಷೇತ್ರಕ್ಕೆ ಅವರು ನೀಡಿದ ಕೊಡುಗೆ ಅನರ್ಘ್ಯವಾದುದು’’ ಎಂದು ಪೋಸ್ಟ್ ಮಾಡಿದ್ದಾರೆ.
ಆಚಾರ್ಯ ಸತ್ಯೇಂದ್ರ ದಾಸ್ ಅವರು 1992ರ ಡಿಸೆಂಬರ್ 6ರಂದು ಬಾಬ್ರಿ ಮಸೀದಿಯನ್ನು ಕೆಡವಿದ ಬಳಿಕ ನಿರ್ಮಿಸಲಾಗಿದ್ದ ತಾತ್ಕಾಲಿಕ ರಾಮಮಂದಿರದ ಅರ್ಚಕರಾಗಿದ್ದರು. ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರದ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಮತ್ತು ದೇವಾಲಯದ ಆಡಳಿತ ಮಂಡಳಿಯವರು ಸೇರಿ ಹಲವರು ಆಚಾರ್ಯರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.