ಲೈಂಗಿಕ ದೌರ್ಜನ್ಯ ಹಾಗೂ ಕೊಲೆ ಆರೋಪಿಗಳಾಗಿರುವ ನಟ ದರ್ಶನ್, ಪ್ರಜ್ವಲ್ ರೇವಣ್ಣ, ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ಸೂರಜ್ ರೇವಣ್ಣ ವಿರುದ್ಧ ಮಾಜಿ ಸಂಸದೆ ಹಾಗೂ ನಟಿ ರಮ್ಯಾ (Ramya) ಆಕ್ರೋಶ ವ್ಯಕ್ತಪಡಿಸಿದ್ದಾರೆ.
ರಾಜ್ಯದಲ್ಲಿ ಸದ್ಯ ಕಾನೂನು ಉಲ್ಲಂಘಿಸಿ ಸುದ್ದಿಯಲ್ಲಿರುವವರು ಶ್ರೀಮಂತರು ಮತ್ತು ಶಕ್ತಿಶಾಲಿಗಳು. ಅವರ ಹಿಂಸಾತ್ಮಕ ಕ್ರಿಯೆಯಿಂದಾಗಿ ಬಡವರು, ಮಹಿಳೆಯರು ಮತ್ತು ಮಕ್ಕಳ ಬದುಕು ನಾಶವಾಗಿ ಬೀದಿಗೆ ಬಂದಿದೆ ಎಂದು ಎಕ್ಸ್ ನಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಅಪರಾಧಗಳನ್ನು ಹೊರಗೆ ತಂದ ಪೊಲೀಸರಿಗೆ ಮತ್ತು ಮಾಧ್ಯಮಗಳಿಗೆ ಹ್ಯಾಟ್ಸ್ ಆಫ್. ವಿಚಾರಣೆಯನ್ನು ತ್ವರಿತಗೊಳಿಸಿದಾಗ ಮತ್ತು ಪ್ರಕರಣಗಳನ್ನು ಅವುಗಳ ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ದಾಗ ನಿಜವಾಗಿಯೂ ನ್ಯಾಯ ಸಿಗುತ್ತದೆ. ನ್ಯಾಯವು ಮೇಲುಗೈ ಸಾಧಿಸದಿದ್ದರೆ, ನಾವು ಸಾರ್ವಜನಿಕರಿಗೆ ಯಾವ ಸಂದೇಶವನ್ನು ನೀಡುತ್ತೇವೆ? ಎಂದು ರಮ್ಯಾ ಪೋಸ್ಟ್ ಮೂಲಕ ಆಗ್ರಹಿಸಿದ್ದಾರೆ.

ನಟಿ ರಮ್ಯಾ ತಮ್ಮ ಪೋಸ್ಟ್ ನೊಂದಿಗೆ ಮಾಜಿ ಸಂಸದ ಪ್ರಜ್ವಲ್ ರೇವಣ್ಣ, ನಟ ದರ್ಶನ್, ಮಾಜಿ ಸಿಎಂ ಯಡಿಯೂರಪ್ಪ, ಎಂಎಲ್ಸಿ ಸೂರಜ್ ರೇವಣ್ಣ ಹೆಸರುಗಳನ್ನು ಟ್ಯಾಗ್ ಮಾಡಿದ್ದಾರೆ. ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣ (Prajwal Revanna) ನ್ಯಾಯಾಂಗ ಬಂಧನದಲ್ಲಿದ್ದಾರೆ. ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್ (Darshan) ಪೊಲೀಸ್ ಕಸ್ಟಡಿಯಲ್ಲಿದ್ದಾರೆ. ಬಾಲಕಿಗೆ ಲೈಂಗಿಕ ದೌರ್ಜನ್ಯ ನೀಡಿದ ಆರೋಪದಲ್ಲಿ ಮಾಜಿ ಸಿಎಂ ಯಡಿಯೂರಪ್ಪ (B.S.Yediyurappa) ವಿರುದ್ಧ ಪೋಕ್ಸೊ ಪ್ರಕರಣ ದಾಖಲಾಗಿದೆ.
