ಬೆಂಗಳೂರು: ಅಶ್ಲೀಲ ವಿಡಿಯೋ ಹಾಗೂ ಅತ್ಯಾಚಾರ ಪ್ರಕರಣದಲ್ಲಿ ಬಂಧಿತರಾಗಿರುವ ಹಾಸನ ಲೋಕಸಭಾ ಕ್ಷೇತ್ರದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರ ಭವಿಷ್ಯ ಇಂದು ನಿರ್ಧಾರವಾಗಲಿದೆ.
26 ಸಾಕ್ಷಿಗಳ ವಿಚಾರಣೆ ನಡೆಸಿರುವ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಈ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣ ಅಪರಾಧಿಯೋ ಅಥವಾ ಅಲ್ಲವೋ ಎಂದು ತೀರ್ಪು ನೀಡಲಿದೆ. ಮಗನನ್ನು ಜೈಲಿಂದ ಹೊರತರಲು ರೇವಣ್ಣ ಪರದಾಡುತ್ತಿದ್ದಾರೆ.
ಪ್ರಜ್ವಲ್ ರೇವಣ್ಣ ಮೇಲಿನ ದೋಷಾರೋಪಗಳ ಪಟ್ಟಿ :
ನ್ಯಾಯಧೀಶರಾದ ಸಂತೋಷ್ ಗಜಾನನ ಭಟ್ ಅವರು ವಿಚಾರಣೆ ಪೂರ್ಣಗೊಳಿಸಿ ಇಂದು ತೀರ್ಪು ಕಾಯ್ದಿರಿಸಿದ್ದಾರೆ. ಪ್ರಜ್ವಲ್ ರೇವಣ್ಣ ವಿರುದ್ಧ ಹಲವು ಸೆಕ್ಷನ್ಗಳ ಅಡಿಯಲ್ಲಿ ಕೇಸ್ ದಾಖಲಾಗಿದೆ.
ಐಪಿಸಿ ಸೆಕ್ಷನ್ 376 (2)(k) ಅಡಿ ಮಹಿಳೆಯ ಮೇಲೆ ಹಕ್ಕು ಚಲಾಯಿಸುವ ಸ್ಥಿತಿಯಲ್ಲಿದ್ದು ಅತ್ಯಾಚಾರ ಎಸಗಲಾಗಿದೆ. 376 (2) (n) ಅಡಿ ಮಹಿಳೆಯ ಮೇಲೆ ಪದೇ ಪದೇ ಅತ್ಯಾಚಾರ. 354(A) ಲೈಂಗಿಕತೆ ಬೇಡಿಕೆ ಇಡುವುದು. 354 (B) ಮಹಿಳೆಯನ್ನು ವಿವಸ್ತ್ರಗೊಳಿಸುವುದು. 354 (c) ಮಹಿಳೆಯ ಅಶ್ಲೀಲ ದೃಶ್ಯ ಚಿತ್ರೀಕರಿಸುವುದು. 506 ಜೀವ ಬೆದರಿಕೆ, 201 ಸಾಕ್ಷ್ಯನಾಶದ ಅಡಿ ದೋಷಾರೋಪ ಹೊರಿಸಲಾಗಿದೆ.
ಒಂದು ವೇಳೆ ಕೋರ್ಟ್ ಪ್ರಜ್ವಲ್ ರೇವಣ್ಣ ದೋಷಿ ಎಂದು ತೀರ್ಪು ನೀಡಿದರೆ, ಮಾಜಿ ಸಂಸದ ಪ್ರಜ್ವಲ್ ರೇವಣ್ಣ ರಾಜಕೀಯ ಭವಿಷ್ಯವೇ ಮುಗಿಯಲಿದೆ. ಪ್ರಜ್ವಲ್ಗೆ ಕನಿಷ್ಠ 10 ವರ್ಷಗಳಿಂದ ಗರಿಷ್ಠ ಜೀವಾವದಿ ಶಿಕ್ಷೆ ಪ್ರಕಟಿಸುವ ಸಾಧ್ಯತೆ ಇದೆ.
ಸದ್ಯ ಪ್ರಜ್ವಲ್ ರೇವಣ್ಣ ಪರಪ್ಪನ ಅಗ್ರಹಾರದ ಸೆಂಟ್ರಲ್ ಜೈಲಿನಲ್ಲಿದ್ದಾರೆ. ಇಂದಿನ ಪ್ರಕರಣದ ಖುಲಾಸೆಯಾದರು, ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದಂತೆ ಇನ್ನೂ ಮೂರು ಪ್ರಕರಣಗಳು ಬಾಕಿ ಇರುವುದರಿಂದ ಕೇಸ್ ಖುಲಾಸೆಯಾದರು ಬಿಡುಗಡೆ ಆಗುವುದು ಅನುಮಾನ ಎನ್ನಲಾಗುತ್ತಿದೆ.



















