ಬಳ್ಳಾರಿ : ಬಡವರ ಹೊಟ್ಟೆ ತುಂಬಿಸುವ ಪಡಿತರ ಅಕ್ಕಿಯನ್ನೇ ಕಳ್ಳಸಾಗಣೆ ಮಾಡುತ್ತಿದ್ದ ಖದೀಮನನ್ನು ಬಳ್ಳಾರಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಸರ್ಕಾರ ಬಡವರಿಗಾಗಿ ನೀಡುವ ಪಡಿತರ ಅಕ್ಕಿಯನ್ನು ಅಕ್ರಮವಾಗಿ ಸಂಗ್ರಹಿಸಿ ಕಳ್ಳಸಾಗಣೆ ಮಾಡುತ್ತಿದ್ದ ಆರೋಪದ ಮೇಲೆ ಶರಭಯ್ಯ(49) ಎಂಬಾತನನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.
ಆರೋಪಿ ಶರಭಯ್ಯ ವಿರುದ್ಧ ಪಿ.ಡಿ.ಹಳ್ಳಿ, ಮೋಕ ಹಾಗೂ ಬಳ್ಳಾರಿ ಗ್ರಾಮಾಂತರ ಸೇರಿದಂತೆ ಒಟ್ಟು ಆರು ಪೊಲೀಸ್ ಠಾಣೆಗಳಲ್ಲಿ ಪ್ರಕರಣಗಳು ದಾಖಲಾಗಿವೆ. 10/2026, 13/2026, 15/2026, 19/2026, 33/2026 ಹಾಗೂ 41/2026 ಸಂಖ್ಯೆಯ ಪ್ರಕರಣಗಳು ದಾಖಲಾಗಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಇಷ್ಟೇ ಅಲ್ಲದೆ, ಶರಭಯ್ಯ ವಿರುದ್ಧ ಈಗಾಗಲೇ ಒಟ್ಟು 40ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿವೆ ಎನ್ನಲಾಗಿದೆ. ಪಡಿತರ ಅಕ್ಕಿ ಕಳ್ಳಸಾಗಣೆ ಸೇರಿದಂತೆ ಹಲವು ಅಕ್ರಮ ಚಟುವಟಿಕೆಗಳಲ್ಲಿ ಈತನ ಹೆಸರು ಕೇಳಿಬಂದಿರುವುದಾಗಿ ತನಿಖೆಯಲ್ಲಿ ಬೆಳಕಿಗೆ ಬಂದಿದೆ.
ಖಚಿತ ಮಾಹಿತಿಯ ಮೇರೆಗೆ ಕಾರ್ಯಾಚರಣೆ ನಡೆಸಿದ ಬಳ್ಳಾರಿ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆಗೊಳಪಡಿಸಿದ್ದಾರೆ. ಬಂಧಿತ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಮುಂದಿನ ಕ್ರಮಕ್ಕಾಗಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಕಳ್ಳಸಾಗಣೆ ಜಾಲದ ಹಿಂದೆ ಇನ್ನೂ ಯಾರು ಇದ್ದಾರೆ ಎಂಬುದರ ಕುರಿತೂ ತನಿಖೆ ಮುಂದುವರಿದಿದೆ.
ಇದನ್ನೂ ಓದಿ : ಹುಟ್ಟುಹಬ್ಬದ ದಿನವೇ ಹಾಸ್ಟೆಲ್‌ನಲ್ಲಿ ಬಿಎಸ್ಸಿ ವಿದ್ಯಾರ್ಥಿನಿ ಆತ್ಮಹತ್ಯೆ


















