ಆರ್ ಸಿಬಿ ಕಾಲ್ತುಳಿತ ಸಂಭವಸಿದ್ದ ಘಟನೆಗೆ ಸಂಬಂಧಿಸಿದಂತೆ ಹಂಗಾಮಿ ಮುಖ್ಯ ನ್ಯಾಯಮೂರ್ತಿ ವಿ. ಕಾಮೇಶ್ವರ ರಾವ್ ನೇತೃತ್ವದ ವಿಭಾಗೀಯ ನ್ಯಾಯಪೀಠವು ಮಾಧ್ಯಮ ವರದಿಗಳನ್ನು ಆಧರಿಸಿ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (PIL) ದಾಖಲಿಸಿಕೊಂಡಿದೆ.
ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡದ ವಿಜಯೋತ್ಸವದ ವೇಳೆ ಸಂಭವಿಸಿದ ಕಾಲ್ತುಳಿತ ಘಟನೆಗೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ಸ್ವಯಂಪ್ರೇರಿತವಾಗಿ (ಸುಮೋಟೊ) ದಾಖಲಿಸಿಕೊಂಡಿರುವ ಪ್ರಕರಣದ ವಿಚಾರಣೆಯನ್ನು ಜೂನ್ 12, 2025ಕ್ಕೆ ಮುಂದೂಡಿದೆ.
ಜೂನ್ 10ರಂದು ನಡೆದ ವಿಚಾರಣೆ ವೇಳೆ ಅಡ್ವೊಕೇಟ್ ಜನರಲ್ ಅವರು ಘಟನೆಗೆ ಸಂಬಂಧಿಸಿದ ವರದಿಯನ್ನು ಜೂನ್ 11ರಂದು ಸಲ್ಲಿಸಲಾಗುವುದು ಎಂದು ನ್ಯಾಯಾಲಯಕ್ಕೆ ತಿಳಿಸಿದ್ದಾರೆ. ಈ ವರದಿಯನ್ನು ಕೂಲಂಕಷವಾಗಿ ಪರಿಶೀಲಿಸಬೇಕಾಗಿರುವ ಹಿನ್ನೆಲೆಯಲ್ಲಿ 12ನೇ ತಾರಿಕಿಗೆ ಮುಂದೂಡಿಕೆ ಮಾಡಲಾಗಿದೆ.
ಕಾಲ್ತುಳಿತದಿಂದ ಉಂಟಾದ ಗೊಂದಲ ಮತ್ತು ಸಾರ್ವಜನಿಕ ಸುರಕ್ಷತೆಯ ಬಗ್ಗೆ ತೀವ್ರ ಕಾಳಜಿ ವಹಿಸಿರುವ ಹೈಕೋರ್ಟ್, ಈ ವಿಷಯದಲ್ಲಿ ಸಮಗ್ರ ತನಿಖೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದೆ. ಇಂತಹ ಘಟನೆಗಳು ಮರುಕಳಿಸದಂತೆ ತಡೆಯಲು ಭವಿಷ್ಯದಲ್ಲಿ ಅಗತ್ಯ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳುವ ಮಹತ್ವವನ್ನೂ ನ್ಯಾಯಾಲಯ ಪರೋಕ್ಷವಾಗಿ ಸೂಚಿಸಿದೆ
ಜೂನ್ 4ರಂದು ಕಾಲ್ತುಳಿತ ಘಟನೆ ಸಂಭವಿಸಿದ ನಂತರ, ಜೂನ್ 5 ರ ಗುರುವಾರ ಕಲಾಪ ಆರಂಭವಾಗುತ್ತಿದ್ದಂತೆ, ಹಂಗಾಮಿ ಮುಖ್ಯ ನ್ಯಾಯಮೂರ್ತಿ ವಿ. ಕಾಮೇಶ್ವರ ರಾವ್ ನೇತೃತ್ವದ ವಿಭಾಗೀಯ ನ್ಯಾಯಪೀಠವು ಮಾಧ್ಯಮ ವರದಿಗಳನ್ನು ಆಧರಿಸಿ ಈ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (PIL) ದಾಖಲಿಸಿಕೊಂಡಿದೆ.