ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆರಾಯನ ಅಬ್ಬರ ಮುಂದುವರೆದಿದ್ದು, ಹಲವೆಡೆ ರಣಭೀಕರ ಮಳೆಗೆ ಜನ – ಜೀವನ ಅಸ್ತವ್ಯಸ್ಥವಾಗಿದೆ. ಅಲ್ಲದೇ, ಇಂದು ಕೂಡ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.
ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಸಹ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ ಜಿಲ್ಲೆಯಾದ್ಯಾಂತ ಇಂದು ಮತ್ತು ನಾಳೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಜುಲೈ 30ರ ವರೆಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ರಾಜ್ಯದಾದ್ಯಂತ ಜುಲೈ 31ರ ವರೆಗೂ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಭಾಗದಲ್ಲಿ ಮುಂದಿನ ಐದಾರು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.
ವ್ಯಾಪಕ ಮಳೆಯ ಹಿನ್ನೆಲೆಯಲ್ಲಿ ಉತ್ತರ ಕನ್ನಡ ಜಿಲ್ಲೆಯ 5 ತಾಲೂಕುಗಳಾದ ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ, ಭಟ್ಕಳ ಶಾಲಾ- ಕಾಲೇಜುಗಳಿಗೆ ರಜೆ ನೀಡಲಾಗಿದೆ. ಹಾಸನ ಜಿಲ್ಲೆಯ ಸಕಲೇಶಪುರ, ಬೇಲೂರು ತಾಲೂಕಿನ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ಇಂದು ರಜೆ ನೀಡಲಾಗಿದೆ. ಚಿಕ್ಕಮಗಳೂರು ಜಿಲ್ಲೆಯ ಕಳಸ, ಮೂಡಿಗೆರೆ, ಶೃಂಗೇರಿ, ಕೊಪ್ಪ, N.R.ಪುರ ತಾಲೂಕಿನ ಶಾಲೆಗಳಿಗೂ ರಜೆ ಘೋಷಣೆ ಮಾಡಲಾಗಿದೆ.