ಬೆಂಗಳೂರು: ರೇಣುಕಾಸ್ವಾಮಿಯನ್ನು ಅಪಹರಣ ಮಾಡುವುದಕ್ಕೆ ಸೂಚನೆ ನೀಡಿದ್ದೇನೆ ಎನ್ನುವುದಕ್ಕೆ ಯಾವುದೇ ಸಾಕ್ಷಿಗಳಿಲ್ಲ. ಹೀಗಾಗಿ ಹೈಕೋರ್ಟ್ ನೀಡಿದ ಜಾಮೀನನ್ನು ರದ್ದುಗೊಳಿಸದಂತೆ ಆರೋಪಿ ದರ್ಶನ್ ಸುಪ್ರೀಂ ಕೋರ್ಟ್‌ಗೆ ಮನವಿ ಮಾಡಿದ್ದಾರೆ.
ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ದರ್ಶನ್ ಸೇರಿ 7 ಆರೋಪಿಗಳಿಗೆ ಹೈಕೋರ್ಟ್ ನೀಡಿದ ಜಾಮೀನನ್ನು ರದ್ದು ಮಾಡುವಂತೆ ಬೆಂಗಳೂರು ಪೊಲೀಸರು ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ವಾದ-ಪ್ರತಿವಾದ ಆಲಿಸಿದ ಕೋರ್ಟ್ ಈಗ ತೀರ್ಪನ್ನು ಕಾಯ್ದಿರಿಸಿದೆ.
ಜುಲೈ 24 ರಂದು ನಡೆದ ಕೊನೆಯ ವಿಚಾರಣೆಯ ಸಂದರ್ಭದಲ್ಲಿ ನ್ಯಾಯಮೂರ್ತಿ ಜೆ.ಬಿ. ಪರ್ದಿವಾಲಾ, ನ್ಯಾಯಮೂರ್ತಿ ಆರ್. ಮಹದೇವನ್ ಅವರಿದ್ದ ನ್ಯಾಯಪೀಠ ನಿಮ್ಮ ವಾದ-ಪ್ರತಿವಾದವನ್ನು ಮೂರು ಪುಟಗಳಲ್ಲಿ ಸಂಕ್ಷಿಪ್ತವಾಗಿ ಒಂದು ವಾರದಲ್ಲಿ ತಿಳಿಸಿ ಎಂದು ಸೂಚಿಸಿದ್ದರು. ಅದರಂತೆ ಪವಿತ್ರಾ ಗೌಡ, ದರ್ಶನ್ ಮತ್ತು ಬೆಂಗಳೂರು ಪೊಲೀಸರ ಪರ ವಕೀಲರು ಲಿಖಿತ ರೂಪದಲ್ಲಿ ವಾದವನ್ನು ಕೋರ್ಟ್ ಗೆ ಸಲ್ಲಿಸಿದ್ದಾರೆ.
ದರ್ಶನ್ ವಾದ ಏನು?
ನಾನು ಯಾವುದೇ ಜಾಮೀನು ಷರತ್ತುಗಳನ್ನು ಉಲ್ಲಂಘಿಸಿಲ್ಲ. ರೇಣುಕಾಸ್ವಾಮಿ ಅಪಹರಣಕ್ಕೆ ಸೂಚನೆ ನೀಡಿದ್ದೇನೆ ಎನ್ನುವುದಕ್ಕೆ ಯಾವುದೇ ಸಾಕ್ಷಿಗಳಿಲ್ಲ. ನನ್ನ ಮತ್ತು ಎ3 ಆರೋಪಿಯಾಗಿರುವ ಪವನ್ ನಡುವೆ ಕರೆಗಳು ಅಥವಾ ವಾಟ್ಸಪ್ ಸಂದೇಶಗಳ ವಿನಿಮಯವಾಗಿಲ್ಲ.
ಸಾಕ್ಷಿಗಳಾದ ಕಿರಣ್, ಮಲ್ಲಿಕಾರ್ಜುನ್ ಮತ್ತು ನರೇಂದ್ರ ಸಿಂಗ್ ಅವರ ಹೇಳಿಕೆಗಳ ವಿಶ್ವಾಸಾರ್ಹತೆ ಬಗ್ಗೆ ಅನುಮಾನವಿದೆ ಎಂದು ಹೇಳಿಕೆಯಲ್ಲಿ ಉಲ್ಲೇಖಿಸಲಾಗಿದೆ. ಘಟನೆ ನಡೆದ 7 ದಿನಗಳ ಬಳಿಕ ಕಿರಣ್ ಹೇಳಿಕೆಯನ್ನು ದಾಖಲಿಸಲಾಗಿದೆ. ಸಾಕ್ಷಿಗಳಾದ ಮಲ್ಲಿಕಾರ್ಜುನ್ ಮತ್ತು ನರೇಂದ್ರ ಸಿಂಗ್ ನ್ಯಾಯಾಲಯದಲ್ಲಿ ದರ್ಶನ್ ಹೆಸರನ್ನು ಉಲ್ಲೇಖಿಸಿಲ್ಲ.