ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ಹೈಕೋರ್ಟ್ ನೀಡಿದ್ದ ಜಾಮೀನು ಆದೇಶವನ್ನು ಸುಪ್ರೀಂ ಕೋರ್ಟ್ ಇಂದು ರದ್ದುಗೊಳಿಸಿದ್ದು, ಇದರ ಬೆನ್ನಲ್ಲೆ ಎ2 ಆರೋಪಿ ನಟ ದರ್ಶನ್ ಅವರನ್ನು ಇಂದು ಗುರುವಾರ ಇನ್‌ಸ್ಪೆಕ್ಟರ್ ನಾಗೇಶ್ ಮತ್ತು ಸುಬ್ರಹ್ಮಣ್ಯ ನೇತೃತ್ವದ ತಂಡ ಬಂಧಿಸಿದೆ.
ಹೊಸಕೆರೆಹಳ್ಳಿಯಲ್ಲಿ ಇರುವ ಪತ್ನಿ ವಿಜಯಲಕ್ಷ್ಮಿ ಅವರ ಅಪಾರ್ಟ್‌ಮೆಂಟ್‌ನಲ್ಲಿ ಇದ್ದ ದರ್ಶನ್ ಅವರನ್ನು ಅನ್ನಪೂರ್ಣೇಶ್ವರಿ ನಗರ ಪೊಲೀಸರು ಬಂಧಿಸಿದ್ದಾರೆ. ಈ ಮೊದಲು ದರ್ಶನ್ ಅವರು ನ್ಯಾಯಾಲಯಕ್ಕೆ ಶರಣಾಗುತ್ತಾರೆ ಎಂಬ ಸುದ್ದಿ ಬಂದಿತ್ತು. ಆದರೆ ಪೊಲೀಸರು ದರ್ಶನ್ ನ್ಯಾಯಾಲಯಕ್ಕೆ ಶರಣಾಗುವ ಮೊದಲೇ ಅಪಾರ್ಟ್‌ಮೆಂಟ್‌ಗೆ ತೆರಳಿ ಅವರನ್ನು ಬಂಧಿಸಿದ್ದಾರೆ.
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಎರಡನೇ ಆರೋಪಿಯಾಗಿದ್ದು, ಮೊದಲ ಆರೋಪಿಯಾಗಿರುವ ಪವಿತ್ರಾ ಗೌಡ ಅವರನ್ನು ಈ ಮೊದಲೇ ಬೆಂಗಳೂರಿನ ರಾಜರಾಜೇಶ್ವರಿ ನಗರದಲ್ಲಿರುವ ಅವರ ನಿವಾಸದಲ್ಲಿ ಪೊಲೀಸರು ಬಂಧಿಸಿದ್ದಾರೆ.



















