ತುಮಕೂರು : ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದ (Renukaswamy murder case) ನಾಲ್ವರು ಆರೋಪಿಗಳನ್ನು ತುಮಕೂರು ಜಿಲ್ಲಾ ಕಾರಾಗೃಹಕ್ಕೆ (Tumakuru jail) ಪೊಲೀಸರು ಸ್ಥಳಾಂತರಿಸಿದ್ದಾರೆ.
ಪ್ರಕರಣದ ನಾಲ್ವರು ಆರೋಪಿಗಳಾದ ರವಿಶಂಕರ್, ನಿಖಿಲ್, ಕೇಶವ್ ಹಾಗೂ ಕಾರ್ತಿಕ್ ನನ್ನು ಸ್ಥಳಾಂತರಿಸಲಾಗಿದೆ. 24ನೇ ಎಸಿಎಂಎಂ ನ್ಯಾಯಾಲಯ (Court) ಆರೋಪಿಗಳನ್ನು ತುಮಕೂರು ಕಾರಾಗೃಹಕ್ಕೆ ಸ್ಥಳಾಂತರಿಸುವಂತೆ ಆದೇಶ ನೀಡಿದ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.
ಬಿಗಿ ಪೊಲೀಸ್ ಭದ್ರತೆಯಲ್ಲಿ ತುಮಕೂರು ಹೊರವಲಯದ ರಂಗಾಪುರದಲ್ಲಿರುವ ಕೇಂದ್ರ ಕಾರಾಗೃಹಕ್ಕೆ ಆರೋಪಿಗಳನ್ನು ಸ್ಥಳಾಂತರಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಕಾರಾಗೃಹದ ಸುತ್ತಮುತ್ತ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.
ಭದ್ರತಾ ದೃಷ್ಟಿಯಿಂದ ಆರೋಪಿಗಳನ್ನು ಪರಪ್ಪನ ಅಗ್ರಹಾರ ಜೈಲಿನಿಂದ ಬೇರೆಡೆಗೆ ಸ್ಥಳಾಂತರಿಸಬೇಕು ಎಂದು ನ್ಯಾಯಾಲಯಕ್ಕೆ ಮನವಿ ಮಾಡಲಾಗಿತ್ತು. ಮನವಿಯನ್ನು ಪರಿಗಣಿಸಿದ್ದ ನ್ಯಾಯಾಲಯ ನಾಲ್ವರು ಆರೋಪಿಗಳನ್ನು ಪ್ರತ್ಯೇಕವಾಗಿ ಇಡಲು ಆದೇಶಿಸಿತ್ತು.