ಬೆಂಗಳೂರು: ಚಾಂಪಿಯನ್ಸ್ ಟ್ರೋಫಿಯ (Champions Trophy 2025) ಫೈನಲ್ ಪಂದ್ಯದಲ್ಲಿ ಭಾರತ ತಂಡ ನ್ಯೂಜಿಲೆಂಡ್ ವಿರುದ್ಧ ಭರ್ಜರಿ ಗೆಲುವು ಸಾಧಿಸಿದೆ.
ನ್ಯೂಜಿಲೆಂಡ್ ನೀಡಿದ್ದ 251 ರನ್ಗಳ ಗುರಿ ಬೆನ್ನಟ್ಟಿದ್ದ ಭಾರತ ತಂಡದ ಪರ ನಾಯಕ ರೋಹಿತ್ ಶರ್ಮಾ (Rohit Sharma) ಅರ್ಧಶತಕ ಗಳಿಸಿ, ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ರೋಹಿತ್ ಈ ಪಂದ್ಯದಲ್ಲಿ ಕೇವಲ 41 ಎಸೆತಗಳಲ್ಲಿ ಅರ್ಧಶತಕ ಸಿಡಿಸಿದ್ದಾರೆ. ಐಸಿಸಿ ಫೈನಲ್‌ನಲ್ಲಿ ಇದು ಅವರ ಮೊದಲ ಅರ್ಧಶತಕವಾಗಿದೆ. ಇಲ್ಲಿಯವರೆಗೆ 8 ಐಸಿಸಿ ಟೂರ್ನಮೆಂಟ್‌ನ ಫೈನಲ್ ಪಂದ್ಯಗಳನ್ನು ಆಡಿರುವ ರೋಹಿತ್ಗೆ ಒಂದೇ ಒಂದು ಅರ್ಧಶತಕ ಗಳಿಸಲು ಸಾಧ್ಯವಾಗಿರಲಿಲ್ಲ. ಈ ಪಂದ್ಯದಲ್ಲಿ ಅರ್ಧ ಶತಕ ಗಳಿಸುವ ಮೂಲಕ ಸ್ಮರಣೀಯ ಇನ್ನಿಂಗ್ಸ್ ಆಡಿದ್ದಾರೆ.
ರೋಹಿತ್ ಶರ್ಮಾ ಐಸಿಸಿ ಟೂರ್ನಿಗಳಲ್ಲಿ ಉತ್ತಮ ಪ್ರದರ್ಶನದ ಟ್ರ್ಯಾಕ್ ರೆಕಾರ್ಡ್ ಹೊಂದಿದ್ದಾರೆ. ವೇಗವಾಗಿ ರನ್ ಗಳಿಸುವ ಪ್ರಯತ್ನದಲ್ಲಿ, ಅವರು ಫೈನಲ್ ಪಂದ್ಯದಲ್ಲಿ ದೊಡ್ಡ ಇನ್ನಿಂಗ್ಸ್ ಆಡುವ ಅವಕಾಶವನ್ನು ಹೆಚ್ಚಾಗಿ ಕಳೆದುಕೊಳ್ಳುತ್ತಿದ್ದರು. ಇಂದು ನಡೆಯುತ್ತಿರುವ ನ್ಯೂಜಿಲೆಂಡ್ ವಿರುದ್ಧದ ಫೈನಲ್ ಪಂದ್ಯದಲ್ಲಿ ರೋಹಿತ್ ಬುದ್ಧಿವಂತಿಕೆ ಪ್ರದರ್ಶಿಸಿ, ಅರ್ಧ ಶತಕ ಸಿಡಿಸುವುದರ ಮೂಲಕ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿ ಪಂದ್ಯ ಶ್ರೇಷ್ಠ ಪ್ರಶಸ್ತಿಯನ್ನೂ ಪಡೆದಿದ್ದಾರೆ.
ಶುಭ್ಮನ್ ಗಿಲ್ ಜೊತೆ ಮೊದಲ 10 ಓವರ್‌ಗಳಲ್ಲಿ 64 ರನ್ ಗಳಿಸಿದ ನಂತರ, ರೋಹಿತ್ ಎಚ್ಚರಿಕೆಯಿಂದ ಆಡಲು ಆರಂಭಿಸಿದರು. ನಂತರ 76 ರನ್ಗಳ ಕಾಣಿಕೆ ನೀಡಿ ವಿಕೆಟ್ ಒಪ್ಪಿಸಿದರು. ರೋಹಿತ್ ಶರ್ಮಾ 2007 ರ ಟಿ20 ವಿಶ್ವಕಪ್‌ನಲ್ಲಿ ತಮ್ಮ ಮೊದಲ ಐಸಿಸಿ ಫೈನಲ್ ಆಡಿದ್ದರು. ಪಾಕಿಸ್ತಾನ ವಿರುದ್ಧದ ಈ ಪಂದ್ಯದಲ್ಲಿ ಅವರು 16 ಎಸೆತಗಳಲ್ಲಿ 30 ರನ್ ಗಳಿಸಿದ್ದರು. 2013 ರ ಚಾಂಪಿಯನ್ಸ್ ಟ್ರೋಫಿಯ ಫೈನಲ್‌ನಲ್ಲಿ ಇಂಗ್ಲೆಂಡ್ ವಿರುದ್ಧ 14 ಎಸೆತಗಳಲ್ಲಿ 9 ರನ್ ಗಳಿಸಿದ್ದರು.
2014 ರ ಟಿ20 ವಿಶ್ವಕಪ್ ಫೈನಲ್‌ನಲ್ಲಿ 26 ಎಸೆತಗಳಲ್ಲಿ 29 ರನ್ ಗಳಿಸಿದ್ದರು. 2013 ರ ಚಾಂಪಿಯನ್ಸ್ ಟ್ರೋಫಿಯ ಫೈನಲ್‌ನಲ್ಲಿ ರೋಹಿತ್ಗೆ ಖಾತೆ ತೆರೆಯಲು ಸಾಧ್ಯವಾಗಿರಲಿಲ್ಲ. 2021 ರ ಡಬ್ಲ್ಯೂಟಿಸಿಯಲ್ಲಿ ನ್ಯೂಜಿಲೆಂಡ್ ವಿರುದ್ಧ 34 ಮತ್ತು 30 ರನ್ ಸಿಡಿಸಿದ್ದರು. 2023 ರ ಡಬ್ಲ್ಯೂಟಿಸಿಯಲ್ಲಿ ಆಸ್ಟ್ರೇಲಿಯಾ ವಿರುದ್ಧ 15 ಮತ್ತು 43 ರನ್ ಗಳಿಸಿದ್ದರು. 2023 ರ ಆಸ್ಟ್ರೇಲಿಯಾ ವಿರುದ್ಧದ ಏಕದಿನ ವಿಶ್ವಕಪ್‌ನಲ್ಲಿ 31 ಎಸೆತಗಳಲ್ಲಿ 47 ರನ್ ಗಳಿಸಿ ಔಟಾಗಿದ್ದರು. ದಕ್ಷಿಣ ಆಫ್ರಿಕಾ ವಿರುದ್ಧದ 2024 ರ ಟಿ20 ವಿಶ್ವಕಪ್ ಫೈನಲ್‌ನಲ್ಲಿ 5 ಎಸೆತಗಳಲ್ಲಿ ಕೇವಲ 9 ರನ್ ಗಳಿಸಿದ್ದರು.