ಬೆಂಗಳೂರು: 108 ಆರೋಗ್ಯ ಕವಚದ ಅಂಬುಲೆನ್ಸ್ (108 Ambulence) ಸಿಬ್ಬಂದಿಯ ಸಂಬಳವನ್ನು ಬಾಕಿ ಉಳಿಸಿಕೊಂಡಿಲ್ಲ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ (Dinesh Gundu Rao) ಹೇಳಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಂಬುಲೆನ್ಸ್ ಚಾಲಕರಿಗೆ ನ್ಯಾಯಯುತವಾಗಿ ಸಿಗಬೇಕಾದ ವೇತನವನ್ನ ಕಾಲ ಕಾಲಕ್ಕೆ ಸರಿಯಾಗಿ ಸಂಬಂಧಿಸಿದ ಏಜನ್ಸಿಯವರಿಗೆ ಸರ್ಕಾರ ನೀಡುತ್ತ ಬಂದಿದೆ. ಚಾಲಕರ ವೇತನ ಬಾಕಿ ಉಳಿಸಿಕೊಳ್ಳದಂತೆ ಇ.ಎಂ.ಆರ್ ಏಜನ್ಸಿಯವರಿಗೂ ಸೂಚಿಸಲಾಗಿದೆ ಎಂದಿದ್ದಾರೆ.
ಸಿಬ್ಬಂದಿಯ ಅಕ್ಟೋಬರ್ ತಿಂಗಳ ವೇತನ ಪಾವತಿ ಕೂಡ ಪ್ರಗತಿಯಲ್ಲಿದ್ದು, ಶೀಘ್ರದಲ್ಲಿ ಪಾವತಿಸುವಂತೆ ಸೂಚಿಸಲಾಗಿದೆ ಎಂದು ಹೇಳಿದ್ದಾರೆ.
ಸರ್ಕಾರದಲ್ಲಿ ಯಾವುದೇ ಹಣಕಾಸಿನ ತೊಂದರೆ ಇಲ್ಲ. 2024-25ನೇ ಸಾಲಿನಲ್ಲಿ 108 ಆರೋಗ್ಯ ಕವಚ ಯೋಜನೆಗೆ ಆರ್ಥಿಕ ಇಲಾಖೆಯಿಂದ ಆರೋಗ್ಯ ಇಲಾಖೆಗೆ 260.33 ಕೋಟಿ ರೂ. ಅನುದಾನವನ್ನು ಆಯವ್ಯಯದಲ್ಲಿ ಅನುಮೋದಿಸಲಾಗಿದೆ. ಆರೋಗ್ಯ ಇಲಾಖೆ ಹಾಗೂ ಇ.ಎಂ.ಆರ್.ಐ ಗ್ರೀನ್ ಹೆಲ್ತ್ ಸಂಸ್ಥೆಯವರೊಂದಿಗೆ ಮಾಡಿಕೊಂಡಿರುವ ಒಡಂಬಡಿಕೆಯನ್ವಯ ಪ್ರತಿ ತ್ರೈಮಾಸಿಕಕ್ಕೆ 40.60 ಕೋಟಿಗಳಂತೆ ವಾರ್ಷಿಕ 162.40 ಕೋಟಿ ರೂ. ಅನುದಾನವನ್ನು ಕಾಲ ಕಾಲಕ್ಕೆ ಬಿಡುಗಡೆಗೊಳಿಸಲಾಗುತ್ತಿದೆ ಎಂದಿದ್ದಾರೆ.