ಉಡುಪಿ : ಚಲಿಸುತ್ತಿದ್ದ ಶಾಲಾ ಬಸ್‌ನ ಚಾಲಕನಿಗೆ ಹಠಾತ್ ಹೃದಯಾಘಾತ ಉಂಟಾದ ಪರಿಣಾಮ ಬಸ್ ಡಿವೈಡರ್‌ಗೆ ಡಿಕ್ಕಿ ಹೊಡೆದ ಘಟನೆ ಸೋಮವಾರ ಜಿಲ್ಲೆಯ ಮಣಿಪಾಲದಲ್ಲಿ ನಡೆದಿದ್ದು, ಚಾಲಕನ ಸಮಯಪ್ರಜ್ಞೆಯಿಂದ ಸಂಭವಿಸಬಹುದಾಗಿದ್ದ ಭಾರಿ ಅನಾಹುತ ತಪ್ಪಿದೆ.
ಮಾಧವ ಕೃಪಾ ಶಾಲೆಗೆ ಸೇರಿದ ಬಸ್ ವಿದ್ಯಾರ್ಥಿಗಳನ್ನು ಕರೆದೊಯ್ಯುತ್ತಿದ್ದ ವೇಳೆ ಚಾಲಕ ಸುರೇಶ್ ಸಣ್ಣಕ್ಕಿಬೆಟ್ಟು (54) ಅವರಿಗೆ ಏಕಾಏಕಿ ಎದೆನೋವು ಕಾಣಿಸಿಕೊಂಡು ಅಸ್ವಸ್ಥತೆ ಉಂಟಾಗಿದೆ. ಪರಿಸ್ಥಿತಿಯ ಗಂಭೀರತೆಯನ್ನು ಅರಿತ ಅವರು ಬಸ್‌ನ ನಿಯಂತ್ರಣ ಕಳೆದುಕೊಳ್ಳುವ ಮುನ್ನವೇ ವಾಹನವನ್ನು ರಸ್ತೆ ಬದಿಗೆ ತರುವ ಪ್ರಯತ್ನ ಮಾಡಿದ್ದಾರೆ.
ಈ ಸಂದರ್ಭ ಬಸ್ ಡಿವೈಡರ್‌ಗೆ ಡಿಕ್ಕಿಯಾಗಿದ್ದು, ಅದೃಷ್ಟವಶಾತ್ ಬಸ್ಸಿನಲ್ಲಿದ್ದ ವಿದ್ಯಾರ್ಥಿಗಳಿಗೆ ಯಾವುದೇ ಗಂಭೀರ ಗಾಯಗಳಾಗಿಲ್ಲ. ಘಟನೆಯ ಬಳಿಕ ಸ್ಥಳೀಯರು ಹಾಗೂ ಶಾಲಾ ಸಿಬ್ಬಂದಿ ತಕ್ಷಣ ಚಾಲಕನ ನೆರವಿಗೆ ಧಾವಿಸಿ ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.
ಚಾಲಕನ ಸಮಯೋಚಿತ ಕ್ರಮ ಮತ್ತು ಧೈರ್ಯದಿಂದ ಸಂಭವಿಸಬಹುದಾಗಿದ್ದ ದೊಡ್ಡ ದುರಂತವೊಂದು ತಪ್ಪಿರುವುದು ಗಮನಾರ್ಹವಾಗಿದೆ.
ಇದನ್ನೂ ಓದಿ : ಪತಿಯ ಕ್ರೌರ್ಯ : ಕುತ್ತಿಗೆಗೆ ಬಿಗಿದಿದ್ದ ಸರಪಳಿ ಸಮೇತ 6 ಕಿ.ಮೀ ನಡೆದು ಪೊಲೀಸ್ ಠಾಣೆ ತಲುಪಿದ ಪತ್ನಿ!



















