ದಾವಣಗೆರೆ : ವಿಧವಾ ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಹಿನ್ನೆಲೆಯಲ್ಲಿ ಕೆಎಸ್‌ಆರ್‌ಪಿ ಕಾನ್‌ಸ್ಟೆಬಲ್ ವಿರುದ್ಧ ಹರಿಹರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.
ಶಿವಮೊಗ್ಗ ಜಿಲ್ಲೆಯ ಕೆಎಸ್‌ಆರ್‌ಪಿ ಕಾನ್‌ಸ್ಟೆಬಲ್ ಹನುಮಂತಪ್ಪ ಸಿದ್ದಪ್ಪ ವಿರುದ್ಧ ಮಹಿಳೆ ನೀಡಿದ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಲಾಗಿದೆ. ಮಹಿಳೆ ಮತ್ತು ಆರೋಪಿ ಕಳೆದ ಮೂರು ವರ್ಷಗಳಿಂದ ಸಂಪರ್ಕದಲ್ಲಿದ್ದರು ಎಂದು ತಿಳಿದುಬಂದಿದೆ.
ಇತ್ತೀಚೆಗೆ ಆರೋಪಿಯ ವರ್ತನೆ ಮಿತಿಮೀರಿದ್ದು, ಇದರಿಂದ ಮಹಿಳೆ ಅವರ ಮೊಬೈಲ್ ಸಂಖ್ಯೆಯನ್ನು ಬ್ಲಾಕ್ ಮಾಡಿದ್ದರು ಎನ್ನಲಾಗಿದೆ. ಆದಾಗ್ಯೂ, ಆರೋಪಿ ಬೇರೆ ಬೇರೆ ಮೊಬೈಲ್ ಸಂಖ್ಯೆಗಳ ಮೂಲಕ ಕರೆ ಮಾಡಿ ನಿರಂತರವಾಗಿ ಕಿರುಕುಳ ನೀಡುತ್ತಿದ್ದ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಅಲ್ಲದೆ, ಲೈಂಗಿಕವಾಗಿ ಸಹಕರಿಸದಿದ್ದರೆ ಹಳೆಯ ವಾಟ್ಸ್ಆಪ್ ಸಂದೇಶಗಳು, ಖಾಸಗಿ ಫೋಟೋಗಳು ಹಾಗೂ ಕಾಲ್ ರೆಕಾರ್ಡ್‌ಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ ಎಂದು ಮಹಿಳೆ ಆರೋಪಿಸಿದ್ದಾರೆ.
ನಿರಂತರ ಕಿರುಕುಳದಿಂದ ಮನನೊಂದ ಮಹಿಳೆ ಹರಿಹರ ಗ್ರಾಮಾಂತರ ಠಾಣೆಗೆ ದೂರು ನೀಡಿದ್ದು, ದೂರಿನ ಬೆನ್ನಲ್ಲೇ ಪೊಲೀಸರು ಆರೋಪಿ ವಿರುದ್ಧ ಎಫ್‌ಐಆರ್ ದಾಖಲಿಸಿ ತನಿಖೆ ಆರಂಭಿಸಿದ್ದಾರೆ. ಪ್ರಕರಣ ಹರಿಹರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.



















