ಬೆಂಗಳೂರು: ಸಾಗರ ತಾಲ್ಲೂಕಿನ ಶರಾವತಿ ಹಿನ್ನೀರಿನಲ್ಲಿ ನಿರ್ಮಿಸಲಾದ ಕೇಬಲ್-ಸ್ಟೇಡ್ ಸೇತುವೆಗೆ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೆಸರಿಡುವ ವಿಚಾರಕ್ಕೆ ಸಂಬಂಧಿದಂತೆ ರಾಜ್ಯ ಹಾಗೂ ಕೇಂದ್ರ ಸರ್ಕಾರಕ್ಕೆ ಹೈಕೋರ್ಟ್ ಗುರುವಾರ ನೋಟಿಸ್ ಜಾರಿ ಮಾಡಿದೆ.
ಸೇತುವೆಗೆ ಮಾಜಿ ಸಿಎಂ ಯಡಿಯೂರಪ್ಪ ಹೆಸರು ಇಡಲು ಅನುಮತಿ ನೀಡವಂತೆ ಕೇಂದ್ರ ಸರಕಾರಕ್ಕೆ ನಿರ್ದೇಶನ ಕೋರಿ ಶಿವಮೊಗ್ಗದ ಕೆ.ಹರನಾಥರಾವ್ ರಿಟ್ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯನ್ನು ನ್ಯಾಯಮೂರ್ತಿ ಎಸ್. ಸುನಿಲ್ ದತ್ ಯಾದವ್ ಅವರಿದ್ದ ಏಕಸದಸ್ಯ ಪೀಠ ವಿಚಾರಣೆ ನಡೆಸಿತು. ರಾಜ್ಯ ಸರ್ಕಾರದ ಮೇಲ್ಮೈ ಸಾರಿಗೆ ಸಚಿವಾಲಯ, ಲೋಕೋಪಯೋಗಿ ಇಲಾಖೆಯ ಕಾರ್ಯದರ್ಶಿ ಮತ್ತು ಅದರ ರಾಷ್ಟ್ರೀಯ ಹೆದ್ದಾರಿ ವಿಭಾಗಕ್ಕೆ ನೋಟಿಸ್ ಜಾರಿ ಮಾಡಿದೆ.
ಸೇತುವೆಗೆ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಹೆಸರನ್ನು ನಾಮಕರಣ ಮಾಡಬೇಕು ಎಂದು ಕೋರಿ ಜುಲೈ 7ರಂದು ಕೇಂದ್ರ ಭೂಸಾರಿಗೆ ಇಲಾಖೆ ಮತ್ತು ರಾಜ್ಯ ಸರ್ಕಾರದ ಲೋಕೋಪಯೋಗಿ ಇಲಾಖೆಯ ಕಾರ್ಯನಿರ್ವಾಹಕ ಎಂಜಿನಿಯರ್ ಗೆ ಮನವಿ ಸಲ್ಲಿಸಲಾಗಿದೆ. ಆದರೆ, ಮನವಿಗೆ ಸಂಬಂಧಿಸಿದಂತೆ ಇಲ್ಲಿಯವರೆಗೂ ಯಾವುದೇ ಪ್ರತಿಕ್ರಿಯೆ ಸಿಕ್ಕಿಲ್ಲ. ಪರಿಣಾಮವಾಗಿ ಅರ್ಜಿಯನ್ನು ಸಲ್ಲಿಸುತ್ತಿದ್ದು, ಮನವಿಯನ್ನು ಪರಿಗಣಿಸಲು ಸೂಚನೆ ನೀಡಿಬೇಕು ಎಂದು ಅರ್ಜಿದಾರರು ಕೋರಿದ್ದರು. ವಾದ ಆಲಿಸಿದ ನ್ಯಾಯಪೀಠ, ಕೇಂದ್ರ ಹಾಗೂ ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿ, ವಿಚಾರಣೆಯನ್ನು ಜುಲೈ 17ಕ್ಕೆ ಮುಂದೂಡಿತು.


















