ಬೆಂಗಳೂರು : ಮಂಡ್ಯ ಆರೋಗ್ಯ ಇಲಾಖೆಯಿಂದ ಮೈಸೂರು ಗ್ರಾಮಾಂತರ ಅಬಕಾರಿ ಇಲಾಖೆಗೆ ವರ್ಗಾವಣೆ ಮಾಡಿರುವ ನಕಲಿ ಪತ್ರದ ಕುರಿತು ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ.
ಹೌದು.. ಆರೋಗ್ಯ ಇಲಾಖೆ ಅಧಿಕಾರಿಯನ್ನ ಅಬಕಾರಿ ಇಲಾಖೆಗೆ ವರ್ಗಾವಣೆ ಮಾಡ್ಬೇಕೆಂದು ಸಿಎಂ ಸೂಚನೆ ನೀಡಿದ್ದಾರೆ ಎನ್ನಲಾದ ಪತ್ರ ರಾಜ್ಯದಲ್ಲಿ ಸಾಕಷ್ಟು ಹಲ್ ಚಲ್ ಎಬ್ಬಿಸಿತ್ತು. ಈ ಮೂಲಕ ರ್ಗಾವಣೆ ದಂಧೆಯ ಆರೋಪ ಮಾಡುತ್ತಿದ್ದ ಬಿಜೆಪಿಗೆ ಹೊಸ ಅಸ್ತ್ರವೇ ಸಿಕ್ಕಂತಾಗಿತ್ತು. ಸದ್ಯ ಈ ವಿಚಾರವಾಗಿ ಖದ್ದು ಸಿಎಂ ಸಿದ್ದರಾಮಯ್ಯ ಸುಳ್ಳು ಆದೇಶ ಪ್ರತಿ ಹರಿಬಿಟ್ಟವರ ವಿರುದ್ಧ ಕಿಡಿಕಾರಿದ್ದಾರೆ.
ಈ ಕುರಿತಾಗಿ ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ, ‘ಯಾರೋ ಕೆಲವು ಕಿಡಿಗೇಡಿಗಳು ನನ್ನ ಕಚೇರಿಯ ನಕಲಿ ಟಿಪ್ಪಣಿಯೊಂದನ್ನು ಸೃಷ್ಟಿಸಿ, ಮಂಡ್ಯ ಜಿಲ್ಲೆಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಯಾದ ಡಾ. ಕೆ.ಮೋಹನ್ ಇವರನ್ನು ಮೈಸೂರು ಗ್ರಾಮಾಂತರದ ಅಬಕಾರಿ ಉಪ ಆಯುಕ್ತರಾಗಿ ವರ್ಗಾವಣೆ ಮಾಡಲಾಗಿದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟು, ಅಪಪ್ರಚಾರದಲ್ಲಿ ತೊಡಗಿರುವುದು ಖಂಡನೀಯ ಮತ್ತು ಅತ್ಯಂತ ಗಂಭೀರ ಸ್ವರೂಪದ ಅಪರಾಧವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇನ್ನು ಈ ಬಗ್ಗೆ ನನ್ನ ಸಚಿವಾಲಯದ ಅಧಿಕಾರಿಗಳು ದೂರು ದಾಖಲಿಸಿದ್ದು, ಪೊಲೀಸ್ ಇಲಾಖೆ ಇದರ ಹಿಂದಿರುವ ದುಷ್ಟರನ್ನು ಪತ್ತೆ ಮಾಡಿ, ಕಾನೂನು ಕ್ರಮ ಕೈಗೊಳ್ಳಲಿದೆ ಎಂದು ತಿಳಿಸಿದ್ದಾರೆ.
ಇದನ್ನೂ ಓದಿ : ಮಂಗಳೂರು CCB ಪೊಲೀಸರ ಕಾರ್ಯಾಚರಣೆ | ಡ್ರಗ್ಸ್ ಮಾರಾಟಕ್ಕೆ ಯತ್ನಿಸಿದ್ದ ಮೂವರು ಪೆಡ್ಲರ್‌ಗಳ ಬಂಧನ!



















