ರಾಯಚೂರು : ದೇವದುರ್ಗ ತಾಲ್ಲೂಕಿನ ತಿಂಥಣಿ ಬ್ರಿಜ್ ಕಾಗಿನೆಲೆ ಕನಕ ಗುರುಪೀಠದ ಸಿದ್ದರಾಮನಂದ ಸ್ವಾಮೀಜಿ (55) ಅವರು ಇಂದು ಬೆಳಗಿನ ಜಾವ ಹೃದಯಾಘಾತದಿಂದ ನಿಧನರಾಗಿದ್ದಾರೆ.
ಗುರುವಾರ ಬೆಳಗಿನ ಜಾವ ಸುಮಾರು 3 ಗಂಟೆ ವೇಳೆಗೆ ಸ್ವಾಮೀಜಿಗಳಿಗೆ ಎದೆನೋವು ಕಾಣಿಸಿಕೊಂಡಿದ್ದು, ತಕ್ಷಣವೇ ಅವರನ್ನು ಲಿಂಗಸೂಗೂರು ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಆಸ್ಪತ್ರೆಗೆ ದಾಖಲಿಸುವಷ್ಟರಲ್ಲೇ ಹೃದಯಾಘಾತದಿಂದ ಅವರು ದೈವಾಧೀನರಾಗಿದ್ದಾರೆ ಎಂದು ಪೀಠದ ಭಕ್ತರು ತಿಳಿಸಿದ್ದಾರೆ.
ಇವರ ಅಗಲಿಕೆಗೆ ಸಿಎಂ ಸಿದ್ದರಾಮಯ್ಯ ಎಕ್ಸ್‌ನಲ್ಲಿ ಪೋಸ್ಟ್‌ನಲ್ಲಿ ಸಂತಾಪ ಸೂಚಿಸಿದ್ದು, ಶ್ರೀ ಕಾಗಿನೆಲೆ ಮಹಾಸಂಸ್ಥಾನ ಕನಕಗುರುಪೀಠ ಶಾಖಾ ಮಠ ತಿಂಥಿಣಿ ಬ್ರಿಜ್ ಕಲಬುರ್ಗಿ ವಿಭಾಗೀಯ ಪೀಠದ ಪರಮಪೂಜ್ಯ ಶ್ರೀ ಸಿದ್ದರಾಮಾನಂದಪುರಿ ಮಹಾಸ್ವಾಮಿಗಳು ದೈವಾಧೀನರಾದ ಸುದ್ದಿ ನೋವುಂಟು ಮಾಡಿದೆ. ಧಾರ್ಮಿಕ ಕಾರ್ಯಗಳ ಜೊತೆಗೆ ಸಮಾಜದ ಏಳಿಗೆಯ ಬಗ್ಗೆ ಅಪಾರ ಕಾಳಜಿ, ಶ್ರದ್ಧೆ ಹೊಂದಿದ್ದ ಶ್ರೀಗಳ ಅಗಲಿಕೆ ನಾಡಿಗೆ ತುಂಬಲಾರದ ನಷ್ಟ. ಶ್ರೀಗಳ ದಿವ್ಯಾತ್ಮಕ್ಕೆ ಚಿರಶಾಂತಿ ದೊರಕಲಿ, ಶ್ರೀ ಮಠದ ಭಕ್ತಾದಿಗಳು ಹಾಗೂ ಅಪಾರ ಅನುಯಾಯಿಗಳಿಗೆ ದುಃಖ ಭರಿಸುವ ಶಕ್ತಿ ಸಿಗಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ. ಎಂದು ತಮ್ಮ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ.
ಸ್ವಾಮೀಜಿಗಳ ಅಂತ್ಯಕ್ರಿಯೆಯ ಬಗ್ಗೆ ಸಿದ್ದರಾಮಯ್ಯನವರೊಂದಿಗೆ ಮಾತನಾಡಿ, ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತಿಮ ವಿಧಿ ವಿಧಾನದ ಮೂಲಕ ಇಂದು ಸಂಜೆ 5:00 ಕ್ಕೆ ನೆರವೇರಿಸಲು ತೀರ್ಮಾನಿಸಲಾಗಿದೆ ಎಂದು ಕಾಗಿನೆಲೆ ಗುರುಪೀಠದ ನಿರಂಜನಾನಂದ ಸ್ವಾಮೀಜಿ ತಿಳಿಸಿದ್ದಾರೆ.

ಇದನ್ನೂ ಓದಿ : ಮೈಸೂರಿನ ಯೋಗನರಸಿಂಹ ಸ್ವಾಮಿ ದೇವಾಲಯದಲ್ಲಿ ಗೋಪೂಜೆಯೊಂದಿಗೆ ಸಂಕ್ರಾಂತಿ ಸಂಭ್ರಮ



















