ಬೆಂಗಳೂರು : ವಿಧಾನಮಂಡಲದ ಅಧಿವೇಶನದಲ್ಲಿ ಸರ್ಕಾರದ ವಿರುದ್ಧ ಹೋರಾಟ ನಡೆಸಲು ಬಿಜೆಪಿ ಶಾಸಕಾಂಗ ಸಭೆಯಲ್ಲಿ ಹಲವು ಪ್ರಮುಖ ವಿಚಾರಗಳ ಬಗ್ಗೆ ಚರ್ಚೆ ನಡೆಸಲಾಗಿದೆ. ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲು ಪ್ರಮುಖ ವಿಷಯಗಳನ್ನು ಸದನದಲ್ಲಿ ಪ್ರಸ್ತಾಪಿಸಿ ವಾಗ್ದಾಳಿ ನಡೆಸಲು ಬಿಜೆಪಿ ನಾಯಕರು ಸಿದ್ಧತೆ ನಡೆಸಿದ್ದಾರೆ. ಎರಡೂ ಸದನಗಳಲ್ಲೂ ಹಲವು ವಿಚಾರಗಳನ್ನು ಮುಂದಿಟ್ಟುಕೊಂಡು ಸರ್ಕಾರಕ್ಕೆ ಇರಿಸುಮುರಿಸು ಉಂಟು ಮಾಡಲು ನಿರ್ಧರಿಸಲಾಗಿದೆ.
ರಾಜ್ಯದಲ್ಲಿ ಉಂಟಾಗಿರುವ ತೀವ್ರ ಬರ ಪರಿಸ್ಥಿತಿಯನ್ನು ಎದುರಿಸುವಲ್ಲಿ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂಬ ಆರೋಪವನ್ನು ಬಿಜೆಪಿ ಪ್ರಮುಖವಾಗಿ ಪ್ರಸ್ತಾಪಿಸಲು ಮುಂದಾಗಿದೆ. ಬರ ಪರಿಹಾರ ಕಾಮಗಾರಿಗಳು ಹಾಗೂ ರೈತರಿಗೆ ಅಗತ್ಯ ನೆರವು ನೀಡುವಲ್ಲಿ ಸರ್ಕಾರದ ವೈಫಲ್ಯವನ್ನು ಸದನದಲ್ಲಿ ಪ್ರಶ್ನಿಸಲು ತೀರ್ಮಾನಿಸಲಾಗಿದೆ. ಇದೇ ವೇಳೆ ಅವೈಜ್ಞಾನಿಕ ಬಿಡದಿ ಟೌನ್‌ಶಿಪ್ ಯೋಜನೆಯಿಂದ ಫಲವತ್ತಾದ ಭೂಮಿ ಕಳೆದುಕೊಳ್ಳುವ ಆತಂಕದಲ್ಲಿರುವ ರೈತರ ಹೋರಾಟದ ವಿಚಾರವನ್ನೂ ಸರ್ಕಾರದ ಗಮನಕ್ಕೆ ತರಲು ಬಿಜೆಪಿ ಸಿದ್ಧವಾಗಿದೆ.
ಹಾಗೆಯೇ ವಾಲ್ಮೀಕಿ ಅಭಿವೃದ್ಧಿ ನಿಗಮದ 187 ಕೋಟಿ ರೂಪಾಯಿ ಹಗರಣದಲ್ಲಿ ಭಾಗಿಯಾಗಿದ್ದ ಆರೋಪ ಎದುರಿಸಿದ್ದ ಬಿ. ನಾಗೇಂದ್ರ ಅವರನ್ನು ಮತ್ತೆ ಸಚಿವರನ್ನಾಗಿ ಮಾಡಿರುವುದಕ್ಕೂ ಬಿಜೆಪಿ ತೀವ್ರ ವಿರೋಧ ವ್ಯಕ್ತಪಡಿಸಲು ನಿರ್ಧರಿಸಿದೆ. ನಾಗೇಂದ್ರ ಅವರ ರಾಜೀನಾಮೆ ವಿಚಾರವನ್ನು ಅಧಿವೇಶನದ ಆರಂಭದಲ್ಲೇ ಪ್ರಮುಖವಾಗಿ ಪ್ರಸ್ತಾಪಿಸಿ, ಸರ್ಕಾರದ ವಿರುದ್ಧ ಪಟ್ಟು ಹಿಡಿದು ಹೋರಾಟ ನಡೆಸಲು ಬಿಜೆಪಿ ನಾಯಕರು ನಿರ್ಧರಿಸಿದ್ದಾರೆ.
ಇದರ ಜೊತೆಗೆ ಪಶುವೈದ್ಯಾಧಿಕಾರಿಗಳ ನೇಮಕಾತಿಯಲ್ಲಿ ಅಕ್ರಮದ ಆರೋಪ ಹಾಗೂ ಪೊಲೀಸ್ ಕಾನ್‌ಸ್ಟೆಬಲ್ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆ ವಿಚಾರವೂ ಸದನದಲ್ಲಿ ಪ್ರತಿಧ್ವನಿಸುವ ಸಾಧ್ಯತೆ ಇದೆ. ರಾಜಧಾನಿ ಬೆಂಗಳೂರಿನಲ್ಲಿ ಉಂಟಾಗಿರುವ ಕಸ ವಿಲೇವಾರಿ ಬಿಕ್ಕಟ್ಟಿನ ಬಗ್ಗೆಯೂ ಸರ್ಕಾರವನ್ನು ಪ್ರಶ್ನಿಸಲು ಬಿಜೆಪಿ ಸಿದ್ಧವಾಗಿದೆ. ನಗರದ ವಿವಿಧೆಡೆ ಕಸ ವಿಲೇವಾರಿ ಸಮಸ್ಯೆ ಉಂಟಾಗಿರುವುದಕ್ಕೆ ಸರ್ಕಾರದ ಆಡಳಿತ ವೈಫಲ್ಯವೇ ಕಾರಣ ಎಂದು ಆರೋಪಿಸಿ ಚರ್ಚೆ ನಡೆಸುವ ಸಾಧ್ಯತೆ ಇದೆ.
ಸರ್ಕಾರದ ಮಹತ್ವಾಕಾಂಕ್ಷೆಯ ಗೃಹಲಕ್ಷ್ಮಿ ಯೋಜನೆಯ ಹಣ ದುರ್ಬಳಕೆಯಾಗಿರುವ ಆರೋಪ, ವೃದ್ಧಾಪ್ಯ ವೇತನ, ವಿಧವಾ ವೇತನ ಸೇರಿದಂತೆ ವಿವಿಧ ಸಾಮಾಜಿಕ ಭದ್ರತಾ ಪಿಂಚಣಿಗಳನ್ನು ಸರ್ಕಾರ ತಡೆಹಿಡಿದಿರುವ ಆರೋಪಗಳನ್ನೂ ಬಿಜೆಪಿ ಪ್ರಸ್ತಾಪಿಸಲಿದೆ. ಇದೇ ವೇಳೆ ಮೇಲ್ಮನೆ ಸಭಾಪತಿ ಬಸವರಾಜ ಹೊರಟ್ಟಿ ಅವರ ರಾಜೀನಾಮೆ ವಿಚಾರವನ್ನೂ ಚರ್ಚೆಗೆ ತೆಗೆದುಕೊಳ್ಳಲು ತೀರ್ಮಾನಿಸಲಾಗಿದೆ.
ಇನ್ನು ರಾಜ್ಯದ ಪ್ರಮುಖ ಯೋಜನೆಗಳಲ್ಲಿ ಒಂದಾಗಿರುವ ಮೇಕೆದಾಟು ಯೋಜನೆ ಜಾರಿಯಲ್ಲಿ ಸರ್ಕಾರ ವಿಳಂಬ ನೀತಿ ಅನುಸರಿಸುತ್ತಿದೆ ಎಂಬ ಆರೋಪವನ್ನೂ ಬಿಜೆಪಿ ಸದನದಲ್ಲಿ ಪ್ರಸ್ತಾಪಿಸಲಿದೆ. ಈ ಎಲ್ಲ ವಿಚಾರಗಳನ್ನು ವಿಧಾನಸಭೆ ಹಾಗೂ ವಿಧಾನ ಪರಿಷತ್ ಎರಡೂ ಸದನಗಳಲ್ಲಿ ಚರ್ಚಿಸಿ ಸರ್ಕಾರದ ಮೇಲೆ ಒತ್ತಡ ಹೇರುವ ತಂತ್ರವನ್ನು ಬಿಜೆಪಿ ರೂಪಿಸಿದೆ. ಅದರಲ್ಲೂ ಸಚಿವ ಬಿ. ನಾಗೇಂದ್ರ ಅವರ ರಾಜೀನಾಮೆ ವಿಚಾರವನ್ನು ಮೊದಲಿಗೆ ಪ್ರಸ್ತಾಪಿಸಿ, ಪಟ್ಟು ಹಿಡಿದು ಹೋರಾಟ ನಡೆಸಲು ಬಿಜೆಪಿ ನಿರ್ಧರಿಸಿದೆ.
ಇದನ್ನೂ ಓದಿ : ಬಿಜೆಪಿ ಶಾಸಕಾಂಗ ಸಭೆಯಲ್ಲಿ ಮಹತ್ವದ ಚರ್ಚೆ ; ಅಧಿವೇಶನದಲ್ಲಿ ಸರ್ಕಾರಕ್ಕೆ ಬಿಸಿ ಮುಟ್ಟಿಸಲು ಪ್ಲ್ಯಾನ್



















