ಚಿತ್ರದುರ್ಗ: ನಿನ್ನೆ ರಾತ್ರಿ ಚಿತ್ರದುರ್ಗದ ಜಿಲ್ಲೆ ಹಿರಿಯೂರು ತಾಲೂಕಿನ ಗೊರ್ಲತ್ತು ಕ್ರಾಸ್ ಬಳಿ ಭೀಕರ ರಸ್ತೆ ಅಪಘಾತ ನಡೆದಿದೆ. ಈ ಘಟನೆಯಲ್ಲಿ 10 ಕ್ಕೂ ಹೆಚ್ಚು ಜನರು ಸಾವಿಗೀಡಾಗಿದ್ದಾರೆ. ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ಖಾಸಗಿ ಸ್ಲೀಪರ್ ಕೋಚ್ ಬಸ್ಸು ಹೊತ್ತಿ ಉರಿದಿದೆ. ಈ ಬಸ್‌ನಲ್ಲಿ 10ಕ್ಕೂ ಹೆಚ್ಚು ಪ್ರಯಾಣಿಕರು ಸಜೀವ ದಹನವಾಗಿದ್ದಾರೆ. ಉಳಿದ ಪ್ರಯಾಣಿಕರಿಗೆ ಗಂಭೀರ ಗಾಯವಾಗಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಬಸ್ಸಿನಲ್ಲಿ ಒಟ್ಟು 32 ಸೀಟುಗಳ ಪೈಕಿ 29 ಪ್ರಯಾಣಿಕರು ಪ್ರಯಾಣ ಮಾಡುತ್ತಿದ್ದರು. ಗೋಕರ್ಣದ 25 ಜನ, ಕುಮಟಾದ ಇಬ್ಬರು, ಶಿವಮೊಗ್ಗದ ಇಬ್ಬರು ಪ್ರಯಾಣ ಮಾಡುತ್ತಿದ್ದರು ಎಂದು ವರದಿಯಾಗಿದೆ.

ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಲಾರಿಯೊಂದು ಡಿವೈಡರ್ ಹಾರಿ ಮತ್ತೊಂದು ಕಡೆಯಿಂದ ಬರುತ್ತಿದ್ದ ಬಸ್ಸಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಸ್ಲೀಪರ್ ಕೋಚ್ ಬಸ್ ರಸ್ತೆ ಮಧ್ಯೆ ಹೊತ್ತಿ ಉರಿದಿದೆ. ಲಾರಿ ಚಾಲಕನ ನಿರ್ಲಕ್ಷ್ಯವೇ ಅಪಘಾತಕ್ಕೆ ಕಾರಣ ಎಂದು ಹೇಳಲಾಗಿದೆ. ಲಾರಿ ಹಿರಿಯೂರಿನಿಂದ ಬೆಂಗಳೂರಿಗೆ ತೆರಳುತ್ತಿತ್ತು, ಬಸ್ ಬೆಂಗಳೂರಿನಿಂದ ಶಿವಮೊಗ್ಗಕ್ಕೆ ಹೋಗುತ್ತಿತ್ತು. ಸದ್ಯ ಈ ಕುರಿತು ಹಿರಿಯೂರು ಗ್ರಾಮಾಂತರ ಠಾಣೆಯಲ್ಲಿ ದೂರು ದಾಖಲಾಗಿದೆ.
ಇದನ್ನೂ ಓದಿ : ಸಚಿವ ಜಮೀರ್ ಸೆಕ್ರೆಟರಿ ಮನೆ ಮೇಲೆ ಲೋಕಾ ರೇಡ್ | ಬರೋಬ್ಬರಿ 14.38 ಕೋಟಿ ಮೌಲ್ಯದ ಅಕ್ರಮ ಆಸ್ತಿ ಪತ್ತೆ!



















